ಆರೋಗ್ಯದ ಕಾಳಜಿ ವಹಿಸಿ

ಬಳ್ಳಾರಿಯ ಬಿಡಿಎಎ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಪಾಲಿಕೆ ಮೇಯರ್ ಪಿ.ಗಾದೆಪ್ಪ ಉದ್ಘಾಟಿಸಿದರು. ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಟಿ. ಫಣೇಂಧರ್ ಇದ್ದರು.
ಬಳ್ಳಾರಿಯ ಬಿಡಿಎಎ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಪಾಲಿಕೆ ಮೇಯರ್ ಪಿ.ಗಾದೆಪ್ಪ ಉದ್ಘಾಟಿಸಿದರು. ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಟಿ. ಫಣೇಂಧರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಳಜಿ ವಹಿಸುವುದು ಅಗತ್ಯ
ಬಳ್ಳಾರಿ : ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯ ಅತ್ಯಂತ ಪ್ರಮುಖವಾಗಿದ್ದು, ಕಾಳಜಿ ವಹಿಸುವುದು ಅಗತ್ಯ ಎಂದು ಮಹಾನಗರ ಪಾಲಿಕೆ ಮೇಯರ್ ಪಿ. ಗಾದೆಪ್ಪ ಹೇಳಿದರು.
ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಪೌರಕಾರ್ಮಿಕರಿಗೆ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾಯಿಲೆಗಳು ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗಗಳು ಬರುವ ಮುನ್ನವೇ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಸರ್ಕಾರದಿಂದ ಸಾರ್ವಜನಿಕರ ಆರೋಗ್ಯಕ್ಕಾಗಿ ಉಚಿತವಾಗಿ ಮತ್ತು ರಿಯಾಯಿತಿ ದರದಲ್ಲಿ ಲಭ್ಯವಿರುವ ಹತ್ತಾರು ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಾರ್ವಜನಿಕರು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಮಾತನಾಡಿ, ಬೆಳಗ್ಗೆಯಿಂದ ಸಾಯಂಕಾಲದವರೆಗೆ ನಗರದ ನೈರ್ಮಲ್ಯಕ್ಕಾಗಿ ಶ್ರಮಿಸುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಕುರಿತು ನಿರ್ಲಕ್ಷೃ ವಹಿಸಬಾರದು. ಸರ್ಕಾರ ನೀಡುವ ಭದ್ರತಾ ಪರಿಕರಗಳನ್ನು ಕಡ್ಡಾಯವಾಗಿ ಬಳಸಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಂತೆ ಪ್ರತಿಯೊಬ್ಬ ಪೌರಕಾರ್ಮಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.
ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್‌ಮಾತನಾಡಿ, ನಗರದ ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಆಯುಷ್ ಇಲಾಖೆಯ ವತಿಯಿಂದ ಪ್ರತಿಯೊಬ್ಬ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಟಿ. ಫಣೇಂಧರ್ ಮಾತನಾಡಿ, ಸ್ವಚ್ಛ ಭಾರತ ಕಲ್ಪನೆಯೊಂದಿಗೆ ಪ್ರತಿಯೊಬ್ಬರ ಆರೋಗ್ಯ ಕಾಪಾಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದ್ದು, ಪೌರಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡು ಈ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯ ಉಚಿತವಾಗಿ ನೀಡಲಾಯಿತು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net