ಬಳ್ಳಾರಿ : ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಅಪ್ರಾಪ್ತರ ಗರ್ಭಧಾರಣೆಯನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಅತಿ ದೊಡ್ಡ ವೈಫಲ್ಯವಾಗಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಿದರೆ ಮಾತ್ರ ನಮ್ಮ ಶಿಕ್ಷಣ, ಪೌಷ್ಟಿಕಾಂಶ ಸೇರಿದಂತೆ ಎಲ್ಲ ಸಾಮಾಜಿಕ ನಿಯತಾಂಕಗಳು ಸುಧಾರಿಸಲು ಸಾಧ್ಯ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಅಪ್ರಾಪ್ತರ ಗರ್ಭಧಾರಣೆಯ ಪ್ರತಿಯೊಂದು ಪ್ರಕರಣವೂ ಕಾನೂನಿನ ಪ್ರಕಾರ ಪೋಕ್ಸೋ ಕಾಯ್ದೆಯಡಿಯೇ ಬರುತ್ತದೆ. ಇದರಲ್ಲಿ ಪರಸ್ಪರ ಒಪ್ಪಿಗೆಯ ಪ್ರಶ್ನೆಯೇ ಬರುವುದಿಲ್ಲ. ಅಪ್ರಾಪ್ತ ಬಾಲಕಿಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆದಿರುವುದು ಸಾಬೀತಾದರೆ ಅದು ಪೋಕ್ಸೋ ಪ್ರಕರಣವೇ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
ಬಾಲ್ಯವಿವಾಹ ತಡೆಗಟ್ಟಲು ಕೇವಲ ಕಾನೂನು ಕ್ರಮ ಮಾತ್ರವಲ್ಲದೆ, ಗ್ರಾಪಂ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಿದೆ.
ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ಕಾವಲು ಸಮಿತಿಗಳು ಜಂಟಿಯಾಗಿ ಕೆಲಸ ಮಾಡಬೇಕು. ಗ್ರಾಮೀಣ ಭಾಗಗಳಲ್ಲಿ ಸಾಕ್ಷ್ಯಚಿತ್ರಗಳನ್ನು ಪ್ರದರ್ಶನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಬಾಲ್ಯವಿವಾಹ ಅಥವಾ ಪೋಕ್ಸೋ ಪ್ರಕರಣಗಳನ್ನು ದಾಖಲಿಸುವಾಗ ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗುವ ಅವಶ್ಯಕತೆಯಿಲ್ಲ. ಶಾಲಾ ದಾಖಲಾತಿಗಳನ್ನು ಪರಿಶೀಲಿಸಿ, ಬಾಲಕಿಯರ ವಯಸ್ಸನ್ನು ದೃಢೀಕರಿಸಿಕೊಂಡು ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಸಿಂಧೆ ನಂದಿನಿ ಮಾತನಾಡಿ, ಡಿಸೆಂಬರ್ 2025 ರಿಂದ ಮಾರ್ಚ್ 2026 ರವರೆಗೆ ಜಿಲ್ಲೆಯಲ್ಲಿ ಒಟ್ಟು 96 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 02 ನೇರ ಪೋಕ್ಸೋ ಪ್ರಕರಣಗಳು, 92 ಬಾಲ್ಯವಿವಾಹ ಮತ್ತು ಪೋಕ್ಸೋ ಸಂಯೋಜಿತ ಪ್ರಕರಣಗಳು ಮತ್ತು 02 ಪೋಕ್ಸೋ ಜೊತೆಗೆ ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾದ ಪ್ರಕರಣಗಳಾಗಿವೆ. ಅದೇರೀತಿಯಾಗಿ 95 ಪ್ರಕರಣಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬಂದಿದ್ದು, ಈ ಪೈಕಿ 80 ಪ್ರಕರಣಗಳನ್ನು ಇತ್ಯರ್ಥಪಡಿಸಿ ಮಕ್ಕಳನ್ನು ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ 15 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.