ಮೇಳ ಉದ್ಯೋಗದ ಭರವಸೆ ಮೂಡಿಸಿದೆ

ಬಳ್ಳಾರಿಯ ಎಸ್‌ಎಸ್‌ಎ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದ ಕಾರ್ಯಕ್ರಮವನ್ನು ಎಸ್ಪಿ ಡಾ.ಸುಮನ್ ಡಿ. ಪನ್ನೇಕರ್ ಉದ್ಘಾಟಿಸಿದರು. ಜಿಪಂ ಸಿಇಒ ಮಹಮ್ಮದ ಹ್ಯಾರಿಸ್ ಸುಮೈರ್, ವಲಯ ಉಪರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಎಡಿಸಿ ಮಹಮ್ಮದ್ ಎನ್.ಜುಬೇರ್, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದರಿ, ಜಿಲ್ಲಾ ಕೌಶಲಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ  ಇದ್ದರು.
ಬಳ್ಳಾರಿಯ ಎಸ್‌ಎಸ್‌ಎ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದ ಕಾರ್ಯಕ್ರಮವನ್ನು ಎಸ್ಪಿ ಡಾ.ಸುಮನ್ ಡಿ. ಪನ್ನೇಕರ್ ಉದ್ಘಾಟಿಸಿದರು. ಜಿಪಂ ಸಿಇಒ ಮಹಮ್ಮದ ಹ್ಯಾರಿಸ್ ಸುಮೈರ್, ವಲಯ ಉಪರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಎಡಿಸಿ ಮಹಮ್ಮದ್ ಎನ್.ಜುಬೇರ್, ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದರಿ, ಜಿಲ್ಲಾ ಕೌಶಲಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗ
ಬಳ್ಳಾರಿ : ಜಿಲ್ಲೆಯಲ್ಲಿ ಆಯೋಜಿಸಿರುವ ಈ ಉದ್ಯೋಗ ಮೇಳವು ನಿರುದ್ಯೋಗಿ ಯುವಕರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಆಗರವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ)ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಹಯೋಗದೊಂದಿಗೆ ಡಿಡಿಯು-ಜಿಕೆವೈ ಯೋಜನೆಯಡಿ ಬುಧವಾರ ಆಯೋಜಿಸಿದ್ದ ಬಳ್ಳಾರಿ ಉದ್ಯೋಗ ಮೇಳದಲ್ಲಿ ಮಾತನಾಡಿದರು. ಈ ಮೇಳದಲ್ಲಿ ಸುಮಾರು 60ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಆರು ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಉದ್ಯೋಗ ಸಿಗದ ಪದವೀಧರರಿಗೆ ಆಸರೆಯಾಗಲು ಸರ್ಕಾರ ಯುವನಿಧಿಯಡಿ ಆರ್ಥಿಕ ನೆರವು ನೀಡುತ್ತಿದೆ ಎಂದರು.
ಮೇಯರ್ ಪಿ.ಗಾದೆಪ್ಪ ಮಾತನಾಡಿ, ಜಿಲ್ಲೆಯು ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತಿ ಹೆಚ್ಚು ಕೈಗಾರಿಕೆ ಕಂಪನಿಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಈ ಮಹತ್ವದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.
ವಲಯ ಐಜಿಪಿ ಡಾ.ಪಿ.ಎಸ್. ಹರ್ಷ ಮಾತನಾಡಿ, ಯುವಪೀಳಿಗೆಗೆ ಅಗತ್ಯವಾದುದು ಉದ್ಯೋಗಾವಕಾಶ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಮೇಳಗಳು ಅತಿ ಅವಶ್ಯಕವಾಗಿವೆ. ಈ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದರು.
ಜಿಪಂ ಸಿಇಒ ಮಹಮ್ಮದ ಹ್ಯಾರಿಸ್ ಸುಮೈರ್ ಮಾತನಾಡಿ, ಜಿಲ್ಲೆಯಲ್ಲಿ ಪದವೀಧರರು, ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಪ್ರತಿಭಾವಂತ ಅಭ್ಯರ್ಥಿಗಳಿದ್ದಾರೆ. ಆದರೆ, ಕಂಪನಿಗಳು ಮತ್ತು ಅಭ್ಯರ್ಥಿಗಳ ನಡುವೆ ನೇರ ಸಂಪರ್ಕದ ಕೊರತೆಯಿದೆ. ಇದನ್ನು ಹೋಗಲಾಡಿಸಲು ಉದ್ಯೋಗ ಮೇಳ ವೇದಿಕೆ ಸಿದ್ಧಪಡಿಸಲಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪುಸ್ತಕದ ಜ್ಞಾನವಿದ್ದರೆ ಸಾಲದು. ಕಂಪ್ಯೂಟರ್ ಲ್ಯಾಂಗ್ವೇಜ್‌ಗಳಾದ ಪೈಥಾನ್, ಜಾವಾ, ಡೇಟಾ ಸೈನ್ಸ್ ಹಾಗೂ ಎಐ-ಎಂಎಲ್ ನಂತಹ ವಿಶೇಷ ಕೌಶಲಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ. ಮುಖ್ಯವಾಗಿ ಅಭ್ಯರ್ಥಿಗಳಲ್ಲಿ ಕೌಶಲ್ಯದ ಜತೆಗೆ ಆತ್ಮವಿಶ್ವಾಸ ಇರುವುದು ಅತಿ ಮುಖ್ಯ. ಆಗ ಮಾತ್ರ ಸಂದರ್ಶನಗಳಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕೇವಲ ಪದವಿ ಪ್ರಮಾಣಪತ್ರಗಳಿಂದ ಕೆಲಸ ಸಿಗುವುದು ಕಷ್ಟ. ಕೈಗಾರಿಕೆಗಳ ಬೇಡಿಕೆಗೆ ತಕ್ಕಂತೆ ಕೌಶಲಗಳನ್ನು ನಿರಂತರವಾಗಿ ಅಪ್‌ಡೇಟ್ ಮಾಡಿಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು.
ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನೋಂದಾಯಿಸಿಕೊಳ್ಳಲು ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿತ್ತು. ಕಾಲೇಜಿನ ವಿವಿಧ ಕೊಠಡಿಗಳಲ್ಲಿ ವಿವಿಧ ಕಂಪನಿಗಳ ಉದ್ಯೋಗದಾತರು ಅಭ್ಯರ್ಥಿಗಳನ್ನು ಸಂದರ್ಶಿಸಿದರು. ಕಾಲೇಜಿನ ಮುಂಭಾಗದಲ್ಲಿ ಮಾರಾಟಕ್ಕೆ ಸ್ವ-ಸಹಾಯ ಗುಂಪುಗಳ ಮಹಿಳೆಯರಿಂದ ತಯಾರಿಸಿದ ವಿವಿಧ ಉತ್ಪನ್ನಗಳ ಐದು ಮಳಿಗೆಗಳು ತೆರೆಯಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net