ಕೂಡ್ಲಿಗಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆ ಹಿನ್ನೆಲೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದರು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್.ಪಿ. ಎಸ್. ಜಾಹ್ನವಿ, ಜಿಪಂ ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಇತರರಿದ್ದರು.
ಕೂಡ್ಲಿಗಿ: ರಾಜ್ಯದಲ್ಲಿ ಐದು ಗ್ಯಾರಂಟಿಗಳ ಮಧ್ಯೆ ಅನುದಾನ ಸಿಗುವುದು ಕಷ್ಟವಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಪಟ್ಟಣದ ಶಾಸಕರ ಕಚೇರಿ ಮುಂಭಾಗದಲ್ಲಿ ನ.9ರಂದು 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.
ಗ್ಯಾರಂಟಿ ಯೋಜನೆಗೆ ಪ್ರತಿ ವಷರ್ 55 ರಿಂದ 60 ಸಾವಿರ ಕೋಟಿ ರೂ.ಬೇಕು. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುವುದು ಕಷ್ಟವಾಗಿದೆ. ಇದರ ಮಧ್ಯೆಯೂ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸಾಕಷ್ಟು ಅನುದಾನ ಪಡೆದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದಲೂ ಮಾಡದಷ್ಟು ಕೆಲಸಗಳನ್ನು ಮಾಡಿದ್ದಾರೆ.
ಸಂಪುಟದ ಯಾವ ಮಂತ್ರಿಯನ್ನೂ ಬಿಡದೆ ಅವರಿಗೆ ಹಿಂದುಳಿದ ತಾಲೂಕಿನ ಬವಣೆ ಮನವರಿಕೆ ಮಾಡಿ ಅನುದಾನ ಬಿಡುಗಡೆ ಮಾಡಿಸಿಕೊಳ್ಳುತ್ತಿದ್ದಾರೆ. ಇದು ಕ್ಷೇತ್ರದ ಬಗ್ಗೆ ಶಾಸಕರಿಗೆ ಇರುವ ಕಾಳಜಿಯನ್ನು ತೋರುತ್ತದೆ. ಮೈಕ್ರೋ ಅನುದಾನದಲ್ಲಿ 44 ಕೋಟಿ ರೂ.ಅನುದಾನವನ್ನು ಅವರೊಬ್ಬರೆ ಪಡೆದಿದ್ದಾರೆ. ಕ್ಷೇತ್ರದ ಬಗ್ಗೆ ಅತ್ಯಂತ ಕಾಳಜಿ ವಹಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಅರ್ಹತೆಗೆ ಈ ಬಾರಿ ಮಂತ್ರಿಯಾಗುವ ಸಂಭವವಿದೆ. ಒಂದು ವೇಳೆ ಮಂತ್ರಿಯಾದರೆ ಇನ್ನೂ ಹೆಚ್ಚಿನ ಕೆಲಸ ಮಾಡುತ್ತಾರೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಅಧ್ಯಕ್ಷ ಮಹಮ್ಮದ್ ಜಿಲಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ ಇತರರಿದ್ದರು.