ಕಾಲೇಜಿನ ಮೇಲೆ ದೌರ್ಜನ್ಯ ಖಂಡನೀಯ

ಅಲ್ಲಂ ಪ್ರಶಾಂತ್
ಅಲ್ಲಂ ಪ್ರಶಾಂತ್
Published on

ಪ್ರಮುಖ ಮುಖ್ಯಾಂಶಗಳು

  • ಖಂಡನೀಯ
ಬಳ್ಳಾರಿ : ನಗರದ ಹೊರವಲಯದಲ್ಲಿರುವ ಖಾಸಗಿ ಪ್ಯೂಪಿಲ್ ಟ್ರಿ ಶಾಲಾ, ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿರುವ ವೇಳೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆಯೂ ಉದ್ದೇಶಪೂರ್ವಕವಾಗಿ ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಶಾಲೆಯ ಟೇಬಲ್, ಕುರ್ಚಿ, ಇತರೆ ಆಸ್ತಿಪಾಸ್ತಿಗಳ ಮತ್ತು ಶಾಲಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಾನಿಗೊಳಪಡಿಸಲಾಗಿದೆ. ಈ ಶಾಲೆಯು ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಿಸ್ತು, ಉತ್ತಮ ಸಂಸ್ಕೃತಿ ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರಸಿದ್ಧಿಯಾಗಿದ್ದು, ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.
ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢವಾದ ಸಾಕ್ಷೃಗಳಿಲ್ಲದೆ ಶಾಲೆಯಲ್ಲಿ ಗಾಂಜಾ ಮತ್ತು ಡ್ರಗ್ಸ್ ಮಾರಾಟವಾಗುತ್ತಿದೆ ಎಂಬ ಅಪವಾದವನ್ನು ಹೊರಿಸಿ ಇಂತಹ ಕೃತ್ಯ ಎಸಗಿರುವುದು ಕಾನೂನು ಮತ್ತು ಸುವ್ಯವಸ್ಥೆಗೆ ವಿರುದ್ಧವಾಗಿದೆ. ಇಂತಹ ವಿಷಯಗಳ ಕುರಿತು ಯಾವುದೇ ಅನುಮಾನಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ನೀಡುವುದು ಸೂಕ್ತ ಮಾರ್ಗ ಮರೆತು, ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಆದ್ದರಿಂದ, ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಇನ್ಮೊಂದೆ ಯಾವುದೇ ಶಿಕ್ಷಣ ಸಂಸ್ಥೆಯ ಮೇಲೆ ಇಂತಹ ದುಷ್ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗಿದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net