

ಮೈಸೂರು: ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಕೆ, ಮಾರಾಟ ಹಾಗೂ ಯಾವುದೇ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಸಿದ್ದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿ ಮತ್ತು ಮಣ್ಣಿನ ಗೌರಿ ಮತ್ತು ಗಣೇಶ ಮೂರ್ತಿಗಳನ್ನು ಪೂಜಿಸಿ ಸರಳ ಆಚರಣೆ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಷೇಧಿತ ಪಿ.ಒ.ಪಿ. ಗಣೇಶ ಮೂರ್ತಿಗಳಿರುವ ಬಗ್ಗೆ ಮಾಹಿತಿ, ದೂರು ಸ್ವೀಕೃತವಾದರೆ, ಪ್ರತಿದಿನ ಅಧಿಕಾರಿಗಳು ಗಸ್ತು ತಿರುಗಿ ಕ್ರಮಕೈಗೊಳ್ಳಬೇಕು. ಪಿ.ಒ.ಪಿ. ವಿಗ್ರಹಗಳೆಂದು ಖಚಿತಪಟ್ಟಲ್ಲಿ ನಿಯಮಾನುಸಾರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದ ಕಾರ್ಯಪಡೆಯಲ್ಲಿ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಮುಖ್ಯಾಧಿಕಾರಿಗಳು, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿದ್ದು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಿ.ಒ.ಪಿ. ವಿಗ್ರಹಗಳನ್ನು ಪರಿಶೀಲಿಸಿ ಮುಟ್ಟುಗೋಲು ಹಾಕಿಕೊಳ್ಳಲು ಸೂಕ್ತ ಕ್ರಮವಹಿಸಬೇಕು ಎಂದರು.
ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಸಾರ್ವಜನಿಕರಿಗೆ ದೂರದರ್ಶನ ಜಾಹಿರಾತು ಮತ್ತು ಜನ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ವಿಗ್ರಹ ತಯಾರಕರು, ಮಾರಾಟಗಾರರು ಮತ್ತು ಗಣಪತಿ ಕೂರಿಸುವ ಸಂಘ ಸಂಸ್ಥೆಗಳಿಗೆ ಅನುಮತಿ ನೀಡಲು ಪೋಲಿಸ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಅಗ್ನಿಶಾಮಕದಳ ಇಲಾಖೆಗಳನ್ನು ಒಳಗೊಂಡ ಏಕಗವಾಕ್ಷಿ ಸಮಿತಿಯನ್ನು ರಚಿಸಲು ಸೂಚಿಸಿ, ಆ ಸಮಿತಿಯು ಗಣೇಶ ಮೂರ್ತಿ ಸ್ಥಾಪನೆಗೆ ಕೋರಿ ಸಲ್ಲಿಸುವ ಅರ್ಜಿಯನ್ನು 24 ಗಂಟೆಯೊಳಗೆ ವಿಲೇವಾರಿ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ವಿಗ್ರಹ ತಯಾರಕರು ಮತ್ತು ಮಾರಾಟಗಾರರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಷರತ್ತುಬದ್ಧ ಪ್ರಮಾಣ ಪತ್ರ ನೀಡಬೇಕು ಎಂದು ಹೇಳಿದರು.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿ ಗಣೇಶ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ , ನಗರಸಭೆ, ಪುರಸಭೆಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸುವುದು ಹಾಗೂ ಈ ಸಂಬಂಧ ಜಾಹೀರಾತು ಹೊರಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಮೈಸೂರು ನಗರಪಾಲಿಕೆ, ವಿವಿಧ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಪರಿಸರಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಸ್ಥಾಪನೆಯನ್ನು ಗುರುತಿಸಿ, ಉತ್ತೇಜಿಸಲು ಕ್ರಮವಹಿಸಬೇಕು ಹಾಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಬೇಕು. ಹಬ್ಬದ ಆಚರಣೆಯ ಸಮಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶುಭಾ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.