ನಾಲ್ವಡಿ ಹೆಸರಿಡುವಂತೆ ಪತ್ರ ಚಳವಳಿ: ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಹೇಳಿಕೆ

Tulasi (4)
Published on

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡಬೇಕೆಂದು ಒತ್ತಾಯಿಸಿ ಜಿಲ್ಲೆಯಲ್ಲಿ ಪತ್ರ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್‌ನ ಅಧ್ಯಕ್ಷರೂ ಆದ ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಹೇಳಿದರು.

ರಾಜ್ಯಕ್ಕೆ ನಾಲ್ವಡಿ ಅವರು ಹಲವಾರು ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಗೆ ಅವರ ಹೆಸರಿಡುವುದು ಸೂಕ್ತ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿರುವುದು ಸ್ವಾಗತಾರ್ಹ. ಅದರಂತೆ ಸರ್ಕಾರವನ್ನು ಒತ್ತಾಯಿಸಲು ಜಿಲ್ಲೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಮೂಲಕ ಪತ್ರ ಚಳವಳಿ ಮಾಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರು ಸಂಸ್ಥಾನವನ್ನು ಆಳಿದ ದೊರೆಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೃಷ್ಣರಾಜ ಒಡೆಯರ್ ಅವರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಮೀಸಲು ವ್ಯವಸ್ಥೆ ಜಾರಿಯೊಂದಿಗೆ ಹತ್ತಾರು ಅಭಿವೃದ್ಧಿ ಕಾರ್ಯಗಳ ಮೂಲಕ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ. ಇನ್ನೂ ನೂರಾರು ವರ್ಷಗಳು ಕಳೆದರೂ ಅವರ ಹೆಸರು ಚಿರಸ್ಥಾಯಿಯಾಗಿರುತ್ತದೆ. ಅಂತಹ ಅಗ್ರಮಾನ್ಯರಾದ ನಾಲ್ವಡಿ ಅವರ ಹೆಸರನ್ನು ಹೆದ್ದಾರಿಗೆ ಇಟ್ಟು, ಹೆದ್ದಾರಿಯ ಪ್ರತಿಷ್ಠೆಯನ್ನು ಹೆಚ್ಚಿಸಬೇಕು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಸಲ್ಲಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ವಿಪಕ್ಷಗಳ ನಾಯಕರು ಒತ್ತಡ ಹಾಕಬೇಕು. ಹಾಗೆಯೇ ವಿಧಾನಸೌಧದ ಮುಂದೆ ನಾಲ್ವಡಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಸಲಹೆ ನೀಡಿದರು.

ಟ್ರಸ್ಟ್‌ನ ಉಪಾಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಂಕೇಶ್, ಲೋಕೇಶ್, ಸಚಿನ್, ಶಕುಂತಲಾ, ಮಂಜುಳಾ, ರಾಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net