

ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 76ನೇ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮ ನಡೆಯಲಿರುವ ದೇವನಹಳ್ಳಿ ಪಟ್ಟಣದ ಪದವಿ ಪೂರ್ವ ಕಾಲೇಜು ಕ್ರೀಡಾಂಗಣ ಸೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವುದರ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದರು. ಕ್ರೀಡಾಂಗಣದಲ್ಲಿ ಕುಡಿಯಲು ಶುದ್ಧ ನೀರು, ಲಘು ಉಪಹಾರ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಹೋರಾಟಗಾರರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು. ಸನ್ಮಾನ ಸಮಾರಂಭವನ್ನು ಅಚ್ಚುಕಟ್ಟಾಗಿ ನಡೆಸಿಕೊಡಬೇಕು ಎಂದು ಡಿಸಿ ತಿಳಿಸಿದರು. ಜತೆಗೆ ಕೋವಿಡ್ ಮುಂಜಾಗ್ರತೆ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ತಿಪ್ಪೇಸ್ವಾಮಿ ಅವರಿಗೆ ಸೂಚನೆ ನೀಡಿದರು. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅವರಿಗೆ ತಿಳಿಸಿದರು. ಜತೆಗೆ ಪೊಲೀಸ್ ತುಕಡಿಗಳಿಂದ ಕವಾಯತು ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಿದರು.
ಅಧಿಕಾರಿಗಳ ಕಡ್ಡಾಯ ಹಾಜರಿ: ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಅಭಿವೃದ್ಧಿ ಕುರಿತು ಭಾಷಣ ಮಾಡಲಿದ್ದು, ಎಲ್ಲ ಇಲಾಖೆಗಳು ನಿಗದಿತ ದಿನಾಂಕದೊಳಗೆ ತಮ್ಮ ಇಲಾಖೆಯ ಅಭಿವೃದ್ಧಿ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು ಎಂದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ದೇವನಹಳ್ಳಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು, ವೇದಿಕೆಯ ಅಲಂಕಾರಕ್ಕೆ ಅಗತ್ಯವಿರುವ ಹೂವು, ಗಿಡಗಳು ಹಾಗೂ ವೇದಿಕೆಗೆ ಅವಶ್ಯವಿರುವ ವಸ್ತುಗಳನ್ನು ಪೂರೈಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಗುಣವಂತ ಅವರ ಗಮನಕ್ಕೆ ತಂದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ: ವೇದಿಕೆ ಮುಂಭಾಗ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿಸುವಂತೆ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರದ ಮಾರ್ಗಸೂಚಿಯಂತೆ ಸ್ವಾತಂತ್ರ್ಯ ದಿನ ಆಚರಿಸಲು ಎಲ್ಲ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಕ್ರೀಡಾಂಗಣ ಪರಿಶೀಲನೆ: ಪೂರ್ವಭಾವಿ ಸಭೆಯ ನಂತರ ದೇವನಹಳ್ಳಿ ಟೌನ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್.ಲತಾ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯವಿರುವ ವೇದಿಕೆ ಹಾಗೂ ವ್ಯವಸ್ಥೆ ಪರಿಶೀಲಿಸಿದರು. ಸ್ವಚ್ಛತೆ, ಮೂಲಸೌಕರ್ಯ, ಕೋವಿಡ್ ನಿಯಮಾವಳಿ ಪಾಲನೆ ಬಗ್ಗೆ ಸ್ಥಳದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.