ಬಾಪೂಜಿ ಪ್ರಬಂಧ ಸ್ಪರ್ಧೆ: ಜಿ.ಪಂ.ಸಿಇಒ ಅಧ್ಯಕ್ಷತೆಯಲ್ಲಿ ಸಭೆ

20adarshkdga1
Published on

ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೪ನೇ ಜಯಂತಿಯ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಬಾಪೂಜಿ ಪ್ರಬಂಧ ಸ್ಪರ್ಧೆಗೆ ಸೆ.೨ರೊಳಗೆ ಪ್ರಬಂಧ ಕಳುಹಿಸುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಸೂಚಿಸಿದರು.


ನಗರದ ಗಾಂಧಿ ಭವನದ ಸಭಾಂಗಣದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಸಂಬಂಧ ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಮಾತನಾಡಿ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಆಯಾಯ ಶಾಲಾ ಕಾಲೇಜಿನಿಂದ ಎರಡು ಪ್ರಬಂಧವನ್ನು ಪ್ರಾಂಶುಪಾಲರ ನೇತೃತ್ವದಲ್ಲಿ ಮೌಲ್ಯಮಾಪನ ನಡೆಸಿ ಸೆ.೨೨ ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಡಿಕೇರಿ ಕಚೇರಿಗೆ ಕಳುಹಿಸಿಕೊಡಬೇಕು ಎಂದು ಸೂಚಿಸಿದ ಅವರು, ಪ್ರಬಂಧವನ್ನು ಮೌಲ್ಯಮಾಪನ ಮಾಡಲು ಜಿಲ್ಲಾ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲು ತಿಳಿಸಿದರು.


ತಜ್ಞರ ಸಮಿತಿ ಸೆ.೨೫ ರಂದು ಮೂರು ವಿಭಾಗದ(ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ ಸ್ನಾತಕೋತ್ತರ ಪದವಿ) ಆಯಾಯ ಹಂತದಲ್ಲಿ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನದಲ್ಲಿ ಒಂದು ವಿಭಾಗದಲ್ಲಿ ಹತ್ತು ಪ್ರಬಂಧಗಳನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಮತ್ತೊಂದು ತಜ್ಞರ ಸಮಿತಿಯು ಮೌಲ್ಯಮಾಪನ ಮಾಡಲಿದ್ದಾರೆ ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದರು.


ಈ ನಿಟ್ಟಿನಲ್ಲಿ ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಕಾಲೇಜು ಶಿಕ್ಷಣ ಇಲಾಖೆ ನೋಡಲ್ ಅಧಿಕಾರಿಗೆ ಸೂಚಿಸಿದರು.


ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ, ಪದವಿ/ ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕ ವಿಷಯ ನೀಡಲಾಗಿದೆ. ಜತೆಗೆ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ೯೦೦ ಪದಗಳು, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ೧೫೦೦ ಪದಗಳು ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ೨೦೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕಿದೆ ಎಂದರು.


ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ೩ ಸಾವಿರ ರೂ., ದ್ವಿತೀಯ ಬಹುಮಾನ ೨ ಸಾವಿರ, ತೃತೀಯ ಬಹುಮಾನ ೧ ಸಾವಿರ ರೂ ಬಹುಮಾನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.


ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಪ್ರತಿ ವಿಭಾಗದಲ್ಲಿ ಶಾಲಾ ಕಾಲೇಜುಗಳಿಂದ ಕನಿಷ್ಠ ಎರಡು ಪ್ರಬಂಧ ತರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.


ಸಭೆಯಲ್ಲಿ ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ನೋಡಲ್ ಅಧಿಕಾರಿ ವೆಂಕಟೇಶ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ರಾಘವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net