ರೈತ ಸಂಘದಿಂದ ಬಾರುಕೋಲು ಚಳವಳಿ

05 HANUR 1A
ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಹನೂರಿನಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಪೊರಕೆ ಹಾಗೂ ಬಾರುಕೋಲು ಪ್ರತಿಭಟನೆ ನಡೆಸಿದರು.
Published on

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು, ರೈತರು ಪೊರಕೆ ಹಾಗೂ ಬಾರುಕೋಲು ಹಿಡಿದು ಪ್ರತಿಭಟನೆ ನಡೆಸಿದರು.

ಪಟ್ಟಣದ ರಾಮಾಪುರ ಮಹದೇಶ್ವರ ಬೆಟ್ಟ ವಿಭಜಕ ರಸ್ತೆಯಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪೊರಕೆ ಹಾಗೂ ಬಾರುಕೋಲು ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಕಾರರು ಖಾಸಗಿ ಬಸ್ ನಿಲ್ದಾಣದ ಬಳಿಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ರೈತರ ಹಾಗೂ ತಾಲೂಕಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮುಖ್ಯ ರಸ್ತೆಯ ಮೂಲಕ ಸಾಗಿ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತರು. ಸುಮಾರು 200ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಸ್ವಾತಂತ್ರ್ಯ ಪಡೆದು 7 ದಶಕಗಳಾದರೂ ಹನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಮೂಲಸೌಕರ್ಯಗಳು ಮರಿಚೀಕೆಯಾಗಿವೆ. ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗ್ರಾಮಗಳಿಗೆ ಮೂಲಸೌಕರ್ಯವಿಲ್ಲದ ಪರಿಣಾಮ ಜನರು ಕಷ್ಟದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಹನೂರಿನಿಂದ ನಾಲ್‌ರೋಡ್ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದೆ. ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ವಿದ್ಯುತ್ ಟ್ರಾನ್ಸ್‌ಫಾರ್ಮರ್ ಅಳವಡಿಸುವಲ್ಲಿ ಸೆಸ್ಕ್ ಅಧಿಕಾರಿಗಳು ಲಂಚ ಪಡೆಯುತ್ತಿದ್ದು, ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ. ಇತ್ತ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.

ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ. ಕೆಲವು ಕಡೆಗಳಲ್ಲಿ ಪಡಿತರ ವಿತರಣೆಯಲ್ಲಿ ಅನ್ಯಾಯವಾಗುತ್ತಿದೆ. ಹೀಗೆ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದು ಭಕ್ತರಿಗೆ ಅನುಕೂಲ ಕಲ್ಪಿಸುತ್ತಿದ್ದಾರೆ. ಆದರೆ, ಇವರ ವರ್ಗಾವಣೆ ವಿಚಾರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಚಾ.ನಗರ ಕ್ಷೇತ್ರದಲ್ಲೇ ಹಲವು ಸಮಸ್ಯೆಗಳಿವೆ. ಆದರೆ ಅದನ್ನು ಬಗೆಹರಿಸುವುದರ ಬದಲು ಸರಸ್ವತಿ ಅವರನ್ನು ವರ್ಗಾಯಿಸುವ ಸಂಬಂಧ ತಲೆ ಹಾಕುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿ ಕಾರಿದರು.

ಅಧಿಕಾರಿಗಳಿಗೆ ತರಾಟೆ: ಈ ವೇಳೆ ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರಲ್ಲಿ ಸಮಸ್ಯೆಯನ್ನು ಹೇಳಿಕೊಂಡ ಪ್ರತಿಭಟನಾಕಾರರು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು. ಈ ವೇಳೆ ಲೋಕೋಪಯೋಗಿ ಇಲಾಖೆ ಎಇಇಗಳಾದ ಚಿನ್ನಣ್ಣ ಹಾಗೂ ಪುರುಷೋತ್ತಮ್ ಅವರನ್ನು ತರಾಟೆಗೆ ತೆಗೆದುಕೊಂಡ ರೈತರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲು 3 ತಿಂಗಳು ಅವಕಾಶ ನೀಡಿದರು. ಇತ್ತ ಕೆಎಸ್ಸಾರ್ಟಿಸಿ ಡಿಪೋ ವ್ಯವಸ್ಥಾಪಕ 4 ವರ್ಷದಿಂದ ಹೊಸ ಬಸ್‌ಗಳು ಬಂದಿಲ್ಲ. ಹಾಗಾಗಿ ಸಮರ್ಪಕ ಬಸ್ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ ತಕ್ಷಣ ಆಕ್ರೋಶಗೊಂಡ ಪ್ರತಿಭಟನಾಕಾರರು ಸಂಬಂಧಪಟ್ಟ ಕೆಎಸ್ಸಾರ್ಟಿಸಿ ಡಿಸಿ ಸ್ಥಳಕ್ಕೆ ಆಗಮಿಸುವಂತೆ ಪಟ್ಟುಹಿಡಿದರು. ಆದರೆ ಅವರು ಆಗಮಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರಿಗೆ ಕಿರುಕುಳ ನೀಡುತ್ತಿರುವ ಆರ್‌ಎಫ್‌ಒ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಹನೂರು ಘಟಕದ ಅಧ್ಯಕ್ಷ ಚಂಗಡಿ ಕರಿಯಪ್ಪ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net