ಮೈಸೂರಿನಲ್ಲಿ ಜೂ.9 ರಂದು ಅದ್ದೂರಿಯ ಬಸವ ಜಯಂತಿ

basavannaa
Published on

ಮೈಸೂರು: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟ ವತಿಯಿಂದ ಜೂ.9 ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಸವ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ. ಪ್ರದೀಪ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ 25 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಆಗಮಿಸಲಿದ್ದಾರೆ. ಜನರನ್ನು ಕರೆತರಲು 250 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 8.30ಕ್ಕೆ ಮೆರವಣಿಗೆಗೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಚಾಲನೆ ನೀಡುವರು. ದೇವನೂರಿನ ಶ್ರೀ ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠದ ಶ್ರೀ ಮಹಾಂತಸ್ವಾಮೀಜಿ ಷಟ್ಸ್ಥಲ ಧ್ವಜಾರೋಹಣ ನೆರವೇರಿಸುವರು. ವಾಟಾಳು ಶ್ರೀ ಸೂರ್ಯಸಿಂಹಾಸನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಗಾವಡಗೆರೆಯ ಶ್ರೀ ಗುರುಲಿಂಗ ಜಂಗಮ ದೇವರ ಮಠದ ಶ್ರೀ ನಟರಾಜ ಸ್ವಾಮೀಜಿ, ಶ್ರೀ ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಶ್ರೀ ಕುದೇರು ಮಠದ ಶ್ರೀ ಗುರುಶಾಂತ ಸ್ವಾಮೀಜಿ, ಶ್ರೀ ಕುಂದೂರು ಮಠದ ಡಾ. ಶ್ರೀ ಶರತ್‌ಚಂದ್ರ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ವೇದಿಕೆಯಲ್ಲಿ ವಚನ ಗಾಯನ ಏರ್ಪಡಿಸಲಾಗಿದೆ ಎಂದರು.

ಬೆಳಗ್ಗೆ 11ಕ್ಕೆ ಸುತ್ತೂರು ಶ್ರೀ ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹಮ್ಮಿಕೊಂಡಿರುವ ಬಸವ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಎಂ.ಬಿ. ಪಾಟೀಲ್, ಬಿ. ಈಶ್ವರ ಖಂಡ್ರೆ, ಕೆ.ವೆಂಕಟೇಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ರಿಂದ 3.30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಸಂಜೆ 4ಕ್ಕೆ ಸುತ್ತೂರು ಶ್ರೀ ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಹಾರನಹಳ್ಳ ಶ್ರೀ ಕೋಡಿಮಠ ಮಹಾಸಂಸ್ಥಾನದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಕನಕಪುರದ ಶ್ರೀ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ದಿವ್ಯ ಸಮ್ಮುಖದಲ್ಲಿ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಹಾಗೂ ಇತರರು ಪಾಲ್ಗೊಳ್ಳಲಿದ್ದು, ಸಂಸದ ವಿ. ಸೋಮಣ್ಣ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಪ್ರತಿಧ್ವನಿ ಪ್ರಸಾದ್, ಒಕ್ಕೂಟದ ಯುವ ಘಟಕ ಅಧ್ಯಕ್ಷ ಶಶಿ, ಕಾರ್ಯಕ್ರಮದ ಸ್ವಚ್ಛತಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ವೇದಿಕೆ ಸಮಿತಿ ಅಧ್ಯಕ್ಷ ಕಿಶೋರ್ ಹದಿನಾರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net