ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ವೆಂಕಟ್ ರಾಜಾ

basavanna
Published on

ಮಡಿಕೇರಿ: ವಿಶ್ವಗುರು ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬಣ್ಣಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಿ ಮಾತನಾಡಿದರು.


ಗೌತಮ ಬುದ್ಧ ನಂತರ ಬಸವೇಶ್ವರರು ರಾಷ್ಟ್ರದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದರು. ೧೨ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿರುವುದು ವಿಶೇಷವಾಗಿದೆ. ಗೌತಮ ಬುದ್ಧ, ಬಸವಣ್ಣ ನಂತರ ಮಹಾತ್ಮ ಗಾಂಧೀಜಿರವರು ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಿದರು. ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರ ವಿಶ್ವಗುರು ಬಸವೇಶ್ವರರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಸಾರಿದೆ ಎಂದರು.


೧೨ನೇ ಶತಮಾನದ ಬಸವೇಶ್ವರರ ನಂತರ ಹಲವು ವಚನಕಾರರು ಸಮಾಜ ಸುಧಾರಣೆಗೆ ಶ್ರಮಿಸಿದ್ದು, ಬಸವಾದಿ ಶರಣರು ಸೇರಿದಂತೆ ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕು. ಬಸವಣ್ಣ ಅವರನ್ನು ಸದಾ ಸ್ಮರಿಸಬೇಕು ಎಂದ ಅವರು ಬಸವಣ್ಣನವರ ಸಾಮಾಜಿಕ ಸುಧಾರಣೆಗಳು ಸಾರ್ವಕಾಲಿಕವಾಗಿದ್ದು, ಅವರ ಸಂದೇಶಗಳು, ಚಿಂತನೆಗಳು ವಿಶ್ವಕ್ಕೆ ಮಾದರಿಯಾಗಿದೆ. ಭಾರತ ಸಂಸತ್ತಿನಲ್ಲಿ ಹಾಗೂ ಲಂಡನ್‌ನಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದರು.


ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಬಸವೇಶ್ವರರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.


ಕೊಪ್ಪ ಭಾರತ ಮಾತಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜ್ಞಾನೇಶ್ ಮಾತನಾಡಿ, ಬಸವ ಪಥಕ್ಕೆ ಅಗ್ರಸ್ಥಾನ ನೀಡಲು ಸರ್ಕಾರ ತೀರ್ಮಾನಿಸಿರುವುದು ವಿಶೇಷವಾಗಿದೆ. ಬಸವೇಶ್ವರರು ಕನ್ನಡ ನಾಡಿನ ಸಂಸ್ಕೃತಿ ಪ್ರತಿಪಾದಿಸಿದ ಮೌಲ್ಯಗಳ ರೂಪಕ. ಬಸವಣ್ಣನವರ ಕತೃತ್ವ ಶಕ್ತಿಯಿಂದ ರೂಪುಗೊಂಡ ವಚನಕಾರರ ಅನುಭವ ಮಂಟಪ ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲೇ ಆಗಿದೆ. ನಾಡಿನ ಸಾಂಸ್ಕೃತಿಕ, ಸಾಹಿತ್ಯಕ, ಪರಂಪರೆ ವಿಶ್ವಕ್ಕೆ ಕೊಡುಗೆ ನೀಡಿರುವ ವಿಶ್ವ ಮಾನವ ಪರಂಪರೆಯ ಬಹುಮುಖ್ಯವಾದ ಕೊಂಡಿಯಾಗಿದ್ದಾರೆ ಎಂದು ನುಡಿದರು.


ಹನ್ನೆರಡನೇ ಶತಮಾನದಲ್ಲಿ ಬಸವೇಶ್ವರರು ಸಾಮಾಜಿಕ ಪರಿವರ್ತನೆ ಮಾಡಿ, ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. ಆ ದಿಸೆಯಲ್ಲಿ ವಿಶ್ವಜ್ಞಾನಿ, ಜಗದ ಜ್ಯೋತಿ ಬಸವೇಶ್ವರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು. ಬಸವೇಶ್ವರರು ನಾಡಿನ ಭಾಷೆಯಾದ ಕನ್ನಡದಲ್ಲಿ ವಚನಗಳನ್ನು ರಚಿಸುವ ಮೂಲಕ ಎಲ್ಲರಿಗೂ ಅರ್ಥವಾಗುವಂತೆ ಮತ್ತು ಹತ್ತಿರವಾಗುವಂತೆ ಸಾಮಾಜಿಕ ಸಂದೇಶಗಳನ್ನು ನೀಡಿದ್ದರು ಎಂದು ಜ್ಞಾನೇಶ್ ವಿವರಿಸಿದರು.


ಬಸವೇಶ್ವರರು ಅನೇಕ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು, ಜಾತಿ-ಮತ-ಪಂಥ ಪದ್ಧತಿಯ ನಿರ್ಮೂಲನೆಗೆ ಶ್ರಮಿಸಿದರು. ಆ ನಿಟ್ಟಿನಲ್ಲಿ ಬಸವೇಶ್ವರರ ಆದರ್ಶಗಳು ಇಂದಿಗೂ ದಾರಿದೀಪವಾಗಿವೆ ಎಂದ ಅವರು, ಅಜ್ಞಾನದ ಕಾಲದಲ್ಲಿ ಜ್ಯೋತಿ ಆಗಿ ಕಾಣಿಸಿಕೊಂಡ ಬಸವೇಶ್ವರರು, ಸ್ತ್ರೀಯರಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದು ನುಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಸೆಸ್ಕ್ ಇಇ ಅನಿತಾ ಬಾಯಿ, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು ಇತರರು ಇದ್ದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು. ಮೈಸೂರಿನ ರಾಘವೇಂದ್ರ ತಂಡದವರು ವಚನ ಗಾಯನ ನಡೆಸಿಕೊಟ್ಟರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net