

ಚನ್ನರಾಯಪಟ್ಟಣ: ಸಾಮಾಜಿಕ ಕ್ರಾಂತಿಯ ಹರಿಕಾರ, ರಾಜ್ಯದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿಯನ್ನು ತಾಲೂಕು ಆಡಳಿತ ಮತ್ತು ತಾಲೂಕು ವೀರಶೈವ ಸಮಾಜದ ವತಿಯಿಂದ ಏ.30ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಮಿನಿ ವಿಧಾನಸೌಧದ ತಹಸೀಲ್ದಾರರ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಚನಗಳ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣನವರ ಸಂದೇಶಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರು, ವಿವಿಧ ಸಮಾಜಗಳು, ಸಂಘಟನೆಗಳ ಸಹಕಾರ ಅಗತ್ಯ ಎಂದರು.
ಅಂದು ಬೆಳಗ್ಗೆ 9 ಗಂಟೆಗೆ ಮಿನಿ ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಾಲೂಕು ಕಚೇರಿಯಿಂದ ಮೆರವಣಿಗೆ ಆರಂಭವಾಗಲಿದ್ದು, ಮುಖ್ಯರಸ್ತೆಯ ಮಾರ್ಗದಲ್ಲಿ ನಡೆದು ಬಸವೇಶ್ವರ ದೇವಸ್ಥಾನದ ಬಳಿ ವೇದಿಕೆಗೆ ತಲುಪಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೆ ನೀರು, ಉಪಾಹಾರದ ವ್ಯವಸ್ಥೆಯನ್ನು ವೀರಶೈವ ಸಮಾಜದ ವತಿಯಿಂದ ಮಾಡಲಾಗುವುದು. ಬಸವಣ್ಣನ ಅನುಭವ ಮಂಟಪದಲ್ಲಿ ಎಲ್ಲ ಸಮಾಜದವರನ್ನು ಒಟ್ಟುಗೂಡಿಸಿ ಸಮಾನತೆಯ ಸಮಾಜ ನಿರ್ಮಿಸಲು ಶ್ರಮಿಸಿದ್ದರು. ಆದ್ದರಿಂದ ಎಲ್ಲ ಸಮಾಜದವರನ್ನು ಆಹ್ವಾನಿಸಬೇಕು. ಅಧಿಕಾರಿಗಳು ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಯಂತ್ಯುತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ತಹಸೀಲ್ದಾರ್ ವಿ.ಎಸ್.ನವೀನ್ ಕುಮಾರ್, ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್, ಮುಖ್ಯಾಧಿಕಾರಿ ಕೆ.ಎನ್.ಹೇಮಂತ್, ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೇ ಪರಮೇಶ್, ತಾಲೂಕು ಅಧ್ಯಕ್ಷ ಪಟೇಲ್ ರಾಜಣ್ಣ, ಮುಖಂಡರುಗಳಾದ ವೀರೇಶ್, ಪ್ರಭುಸ್ವಾಮಿ, ಸುರೇಶ್, ಮಂಜುನಾಥ್, ಕಾಂತರಾಜು, ದರ್ಶನ್, ರುದ್ರಸ್ವಾಮಿ, ಚನ್ನೇಗೌಡ, ಶೇಖರ್, ಛಾಯಾ, ಕೃಷ್ಣಮೂರ್ತಿ, ಸಂತೋಷ್, ಬಸವರಾಜು ಗಂಗಾಧರ್, ಗಿರೀಶ್, ದಯಾನಂದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.