

ತಿ.ನರಸೀಪುರ: ತಾಲೂಕಿನ ವಾಟಾಳ್‌ಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಶ್ರೀ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ವಾಟಾಳ್‌ಪುರ ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಪ್ರತಿ ಮನೆಯಲ್ಲೂ ಹಬ್ಬದ ಸಂಭ್ರಮ ಕಂಡುಬಂತು. ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ವಾಟಾಳು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಪುಷ್ಪಾರ್ಚನೆ ನೆರವೇರಿಸಿದರು. ಬಸವ ಜಯಂತಿ ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ ದಾಸೋಹ ಏರ್ಪಡಿಸಲಾಗಿತ್ತು.
ಸಂಜೆ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅಲಂಕರಿಸಿದ ತೆರೆದ ವಾಹನದಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ನಂದಿಕಂಬ, ಮಂಗಳವಾದ್ಯ, ವೀರಗಾಸೆ ಕುಣಿತ ಮೆರವಣಿಗೆ ಮೆರುಗು ಹೆಚ್ಚಿಸಿದವು. ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಇದ್ದರು.