ಮಳೆ ಹಾನಿಗೆ ತಕ್ಷಣ ಪರಿಹಾರ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ

bommayi
Published on

ಉಡುಪಿ: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸಬೇಕು. ಕೃಷಿ ಹಾಗೂ ತೋಟಗಾರಿಕಾ ಬೆಲೆ ಹಾನಿ ಪರಿಶೀಲಿಸಲು ತಾಲೂಕುವಾರು ಕಂದಾಯ, ಕೃಷಿ ಮತ್ತು ಪಿಡಿಒ ಒಳಗೊಂಡ ಜಂಟಿ ತಂಡಗಳನ್ನು ರಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಸಭೆ ನಡೆಸಿದರು.

ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪ್ರಾಥಮಿಕ ಹಂತದ ಪರಿಹಾರ ಬಿಡುಗಡೆಗೊಳಿಸಬೇಕು. ಮನೆ ಹಾನಿಯ ವಿವರ ಕುರಿತು ರಾಜೀವ ಗಾಂಧಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಹಾನಿಯದ ದಿನವೇ ಅಪ್‌ಲೋಡ್ ಮಾಡಬೇಕು.

ಹಾನಿಯ ಸಮೀಕ್ಷೆಯನ್ನು ಶೀಘ್ರ ನಡೆಸಿ ವರದಿ ಪಡೆದು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಪ್ರಾಕೃತಿಕ ವಿಕೋಪ ನಿಧಿಗೆ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ತಕ್ಷಣ ತಿಳಿಸಬೇಕು. ಜಿಲ್ಲೆಯ ಪ್ರತಿದಿನದ ಹಾನಿಯ ವರದಿಯನ್ನು ತಮಗೆ ನೀಡಬೇಕು ಎಂದು ತಿಳಿಸಿದರು.

ಪ್ರವಾಹ ಪೀಡಿತ ಪ್ರದೇಶಗಳ ಜನತೆಗೆ ಈ ತಿಂಗಳ ಪಡಿತರದ ಜೊತೆಗೆ ಮುಂದಿನ ತಿಂಗಳ ಪಡಿತರವನ್ನೂ ವಿತರಿಸಿ. ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದರು.

ಪ್ರವಾಹ ಭೀತಿಯ 26 ಗ್ರಾಮ ಗುರುತು: ಪ್ರವಾಹದಿಂದ ಜನರನ್ನು ಸ್ಥಳಾಂತರಿಸುವ ಪರಿಸ್ಥಿತಿ ಜಿಲ್ಲೆಯಲ್ಲಿ ಸದ್ಯಕ್ಕೆ ಇಲ್ಲ. ಪ್ರವಾಹ ಭೀತಿ ಇರುವ 26 ಗ್ರಾಮಗಳನ್ನು ಗುರುತಿಸಲಾಗಿದ್ದು, ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲ ಅಧಿಕಾರಿಗಳಿಗೆ ಕೇಂದ್ರಸ್ಥಾನದಲ್ಲಿರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಇದುವರೆಗೆ 116 ಮನೆಗಳಿಗೆ ಭಾಗಶಃ ಮತ್ತು 2 ಮನೆ ಸಂಪೂರ್ಣ ಹಾನಿಯಾಗಿದೆ. ಅವುಗಳಿಗೆ ಪರಿಹಾರ ವಿತರಣೆ ಮಾಡಲಾಗಿದೆ. ವಿಪತ್ತು ಪರಿಹಾರ ನಿಧಿಯಲ್ಲಿ ಹಣದ ಕೊರತೆ ಇಲ್ಲ. ತಹಸೀಲ್ದಾರ್‌ಗಳಿಗೆ ಹಾನಿಯ ಪರಿಹಾರ ವಿತರಿಸುವ ಅಧಿಕಾರ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಳೆದ ತಿಂಗಳು ಶೇ.95ರಷ್ಟು ಪಡಿತರ ವಿತರಣೆ ಆಗಿದೆ. 1000 ಟನ್ ರಸಗೊಬ್ಬರದ ಅವಶ್ಯಕತೆಯಿದ್ದು, ಎಂಸಿಎಫ್‌ನಿಂದ ಶೀಘ್ರ ಸರಬರಾಜು ಆಗಲಿದೆ. ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಇವುಗಳಲ್ಲಿ ಶೇ.88ರಷ್ಟು ಪೂರ್ಣಗೊಂಡಿದೆ. ಮರವಂತೆ ಮತ್ತು ನಾವುಂದಕ್ಕೆ ಭೇಟಿ ನೀಡಿ ನೆರೆ ಪರಿಶೀಲನೆ ನಡೆಸಲಾಗಿದೆ ಎಂದು ಡಿಸಿ ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net