

ಬೆಂಗಳೂರು: ನಗರದಲ್ಲಿ ರಸ್ತೆ ಅಗೆತ ಮಾಡಿರುವ ಭಾಗದ ಪುನರ್‌ಸ್ಥಾಪನೆ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ, ರಸ್ತೆಗಳನ್ನು ಅಗೆದಿರುವ ಭಾಗದ ದುರಸ್ತಿ ಕಾರ್ಯದ ವಿಚಾರವಾಗಿ ಮಲ್ಲೇಶ್ವರದ ಐಪಿಪಿ ಕೇಂದ್ರದಲ್ಲಿ ಸೋಮವಾರ ನಡೆದ ಅಧಿಕಾರಿ ಮಟ್ಟದ ಸಭೆಯಲ್ಲಿ ಮಾತನಾಡಿ ಅವರು ಈ ಸೂಚನೆ ನೀಡಿದರು.
ನಗರದಲ್ಲಿ ಜಲಮಂಡಳಿಯು ಕಾವೇರಿ ನೀರಿನ ಸಂಪರ್ಕ ಹಾಗೂ ಒಳಚರಂಡಿ ಕಾಮಗಾರಿ ನಡೆಸಿರುವ ಕಡೆ, ರಸ್ತೆ ಕತ್ತರಿಸಿದ ಭಾಗದ ಪುನರ್ ಸ್ಥಾಪನೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕುಡಿಯುವ ನೀರಿನ ಸೋರಿಕೆ, ಒಳಚರಂಡಿ ಕೊಳವೆ ಮೇಲ್ಬಾಗ ಕುಸಿದು ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗುತ್ತಿರುವ ರಸ್ತೆಗಳಲ್ಲಿ, ದುರಸ್ತಿ ಕಾರ್ಯ ನಡೆಸಬೇಕು ಎಂದು ನಿರ್ದೇಶಿಸಿದರು.
ದುರಸ್ತಿಗೆ ಜಂಟಿ ಪರಿಶೀಲನೆ:
ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1,344 ಕಿ.ಮೀ. ಇದ್ದು, ಈ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಬಳಸಿಕೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ ರಸ್ತೆ ಗುಂಡಿಗಳು ಇದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೆ ಮುಚ್ಚುವ ಕೆಲಸ ಮಾಡಬೇಕು. ಬೊಮ್ಮಸಂದ್ರ-ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಮೆಟ್ರೋ ಹಾಗೂ ಜಲಮಂಡಳಿ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ರಸ್ತೆ ದುರಸ್ತಿ ಕಾರ್ಯ ನಡೆಸಲು ಸೂಚಿಸಿದರು.
ಬೆಸ್ಕಾಂ, ಕೆಪಿಟಿಸಿಎಲ್, ಬಿಡಿಎ, ರಾಷ್ಟ್ರೀಯ ಹೆದ್ದಾರಿ ನಿಗಮ ಸೇರಿ ಇನ್ನಿತರ ಇಲಾಖೆಗಳ ವತಿಯಿಂದ ಎಲ್ಲೆಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಅದರ ಪಟ್ಟಿ ಪಡೆದುಕೊಂಡು ಕಾಲಮಿತಿಯೊಳಗಾಗಿ ರಸ್ತೆಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಪಾಲಿಕೆ ವಲಯ ಮುಖ್ಯ ಅಭಿಯಂತರರು, ಬೆಸ್ಕಾಂ, ಜಲಮಂಡಳಿ, ಮೆಟ್ರೋ, ಸಂಚಾರ ಪೊಲೀಸ್, ಲೋಕೋಪಯೋಗಿ ಇಲಾಖೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.
ಗುತ್ತಿಗೆದಾರರೊಂದಿಗೆ ಸಭೆ:
ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ದೋಷಮುಕ್ತ ರಸ್ತೆ ಗಳಲ್ಲಿ ತ್ವರಿತವಾಗಿ ರಸ್ತೆಗುಂಡಿಗಳನ್ನು ಮುಚ್ಚಬೇಕು. ಸಮರೋಪಾದಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ವೆಟ್ ಮಿಕ್ಸ್ ಹಾಕಿದ ಬಳಿಕ, ಅವಶ್ಯಕ ಬಿಟಮಿನ್ ಪಡೆದು ಗುಣಮಟ್ಟ ಕಾಪಾಡಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.