ಬಿಬಿಎಂಪಿ: ಒಟಿಎಸ್ ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸಿಕೊಳ್ಳಿ: ಕಡೆಯ ದಿನ ಯಾವಾಗ?

bbmp
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟಿಎಸ್‌ ಯೋಜನೆಯಡಿ 3.2 ಲಕ್ಷ ಸುಸ್ತಿದಾರರು ಆಸ್ತಿ ತೆರಿಗೆ ಬಾಕಿ ಪಾವತಿಸಬೇಕಿದ್ದು, ಶೀಘ್ರವೇ ಸಂಬಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗಾಗಿ ಜಾರಿಗೊಳಿಸಿರುವ ಒಂದು ಬಾರಿ ಪರಿಹಾರ ಯೋಜನೆ(ಒಟಿಎಸ್)ಯು ಇದೇ ಜುಲೈ 31ಕ್ಕೆ ಮುಗಿಯಲಿದ್ದು, ನಾಗರೀಕರು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಳ್ಳ ಬೇಕು " ತಿಳಿಸಿದರು.

1533 ಸಹಾಯವಾಣಿಗೆ ಕರೆ ಮಾಡಿ: ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬುದು ಸೇರಿದಂತೆ ಇನ್ನಿತ್ಯಾದಿ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಡೆಂಘೆ ನಿಯಂತ್ರಣಕ್ಕೆ ಕ್ರಮ: ನಗರದಲ್ಲಿ ಡೆಂಘೆ ನಿಯಂತ್ರಣಕ್ಕಾಗಿ ಕಿರಿಯ ಆರೋಗ್ಯ ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಎಎನ್ಎಂಗಳು, ಲಿಂಕ್ ವರ್ಕರ್ಸ್​ಗಳು ಹಾಗೂ ಸ್ವಯಂ ಸೇವಕರನ್ನೊಳಗೊಂಡಂತೆ 3000ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದ್ದು, ನಗರಲ್ಲಿರುವ ಎಲ್ಲಾ 25 ಲಕ್ಷ ಮನೆಗಳಿಗೂ ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸುವ ಜೊತೆಗೆ ಡೆಂಘೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಗರದಲ್ಲಿ 2024 ಜನವರಿಯಿಂದ ಇದುವರೆಗೆ 3815 ಡೆಂಘೆ ಪ್ರಕರಣಗಳು ಕಂಡುಬಂದಿದ್ದು, ಜುಲೈ 1 ರಿಂದ 6ನೇ ತಾರೀಖಿನವರೆಗೆ 776 ಪ್ರಕರಣಗಳು ದೃಢಪಟ್ಟಿವೆ. ಪ್ರತಿನಿತ್ಯ ಸರಾಸರಿ 130 ರಿಂದ 140 ಪ್ರಕರಣಗಳು ದೃಢಪಡುತ್ತಿದ್ದು, ಹೆಚ್ಚು ಪ್ರಕರಣಗಳು ಕಂಡುಬರುವ ಪ್ರದೇಶಗಳಲ್ಲಿ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಅನ್ನು ಹೆಚ್ಚಾಗಿ ಮಾಡಲಾಗುತ್ತಿದೆ ಎಂದರು.

ಪಾಲಿಕೆ ಸಿಬ್ಬಂದಿ ಮನೆ-ಮನೆ ಭೇಟಿ ನೀಡಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಾಗರಿಕರು ತಮ್ಮ-ತಮ್ಮ ಮನೆಗಳಲ್ಲಿ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ತಪ್ಪದೆ ಅನುಸರಿಸಿದಲ್ಲಿ ಮಾತ್ರ ಡೆಂಗೆ ನಿಯಂತ್ರಿಸಲು ಸಾಧ್ಯವಾಗುತ್ತದೆ. ಡೆಂಘೆ ನಿಂತ್ರಣಕ್ಕೆ ನಾಗರಿಕರ ಸಹಕಾರವೇ ಪ್ರಮುಖ ಪಾತ್ರ ವಹಿಸಲಿದ್ದು, ಅದಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಗಿದೆ ಎಂದು ತಿಳಿಸಿದರು.

ಮಳೆ ನಿಂತು-ನಿಂತು ಬರುತ್ತಿರುವ ಪರಿಣಾಮ ನೀರು ನಿಂತಲ್ಲೇ ನಿಂತು ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತಿವೆ. ಒಮ್ಮೆಲೆ ಜೋರಾಗಿ ಮಳೆ ಬಂದರೆ ಸೊಳ್ಳೆಗಳ ಉತ್ಪತ್ತಿ ತಾಣಗಳು ನಾಶವಾಗಲಿದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಉದ್ದೇಶದಿಂದ ಔಷಧಿ ಸಿಂಪಡಣೆ ಮಾಡುವ ಹಾಗೂ ಫಾಗಿಂಗ್ ಮಾಡುವ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸಲು ವಲಯ ಆಯುಕ್ತರಿಗೆ ಸೂಚಿಸಲಾಗಿದೆ ಹೇಳಿದರು.

ರಸ್ತೆ ಗುಂಡಿಗಳನ್ನು ಮುಚ್ಚುವ ಕುರಿತು ವಿನೂತನ ತಂತ್ರಾಂಶ

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಹೊಸದಾಗಿ ಸೃಷ್ಟಿಯಾಗುವ ರಸ್ತೆ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ನಿಟ್ಟಿನಲ್ಲಿ ವಿನೂತನ ತಂತ್ರಾಂಶವನ್ನು ಬಿಡುಗಡೆಗೊಳಿಸಲಾಗುತ್ತಿದೆ. ಈ ತಂತ್ರಾಂಶದಲ್ಲಿ ಅಧಿಕಾರಿಗಳು ಮಾತ್ರವಲ್ಲದೆ ನಾಗರೀಕರಿಗೂ ರಸ್ತೆ ಗುಂಡಿಗಳು ಬಿದ್ದಿರುವ ಬಗ್ಗೆ ಅಪ್ಲೋಡ್ ಮಾಡಲು ಅವಕಾಶ ನೀಡಲಾಗುವುದು. ಇದರಿಂದ ತ್ವರಿತಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಸಹಕಾರಿಯಾಗಲಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net