ಬಿಬಿಎಂಪಿ ಬೆಂಕಿ ಅವಘಡ ಪ್ರಕರಣ ಮೂವರ ವಶಕ್ಕೆ ಪಡೆದ ಪೊಲೀಸರು

BBMP fire
Published on

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿಬಿಎಂಪಿಯ ಇಬ್ಬರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿ ಮೂವರನ್ನು ವಶಕ್ಕೆ ಪಡೆದು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿ.ಎಸ್.ಪ್ರಹ್ಲಾದ್ ನೀಡಿದ ದೂರಿನ ಮೇರೆಗೆ ನಿರ್ಲಕ್ಷೃದ ಆರೋದಪಡಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ಆನಂದ್, ಸ್ವಾಮಿ, ‘ಡಿ’ ಗ್ರೂಪ್ ನೌಕರ ಸುರೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶನಿವಾರ ಮೂವರನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.


ಅಗ್ನಿ ಅವಘಡ ಸಂಬಂಧ ಬಿಬಿಎಂಪಿ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ನಿರ್ಲಕ್ಷೃ ತನದ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಈಗಾಗಲೇ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಯೋಗಾಲಯದಲ್ಲಿ ಬೆಂಜಿಮಿನ್ ಎಂಬ ರಾಸಾಯನಿಕ ಬಳಿಸಿ ಬಿಟುಮಿನ್ ಸಾಮರ್ಥ್ಯವನ್ನು ಪರೀಕ್ಷೆ ಮಾಡುವಾಗ ಬೆಂಕಿ ಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೆಲ ಮಾದರಿ ವಸ್ತುಗಳನ್ನು ಸಂಗ್ರಹಿಸಿದೆ. ಈ ವರದಿ ಬಂದ ಬಳಿಕ ಮುಂದಿನ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ತಿಳಿಸಿದ್ದಾರೆ.


ಅವಘಡದಲ್ಲಿ ಒಟ್ಟು ೯ ಮಂದಿ ಗಾಯಗೊಂಡಿದ್ದಾರೆ. ಕೆಲವು ಗಾಯಾಳುಗಳು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಚಿಕಿತ್ಸೆಗೆ ಸ್ಪಂದಿಸಿ ಮಾತನಾಡುವ ಸ್ಥಿತಿಯಲ್ಲಿರುವ ಕೆಲ ಗಾಯಾಳುಗಳಿಂದ ಹೇಳಿಕೆ ಪಡೆಯಲಾಗಿದೆ. ಇನ್ನು ಪ್ರಯೋಗಾಲಯದ ಸಿಬ್ಬಂದಿಯಿಂದಲೂ ಕೆಲ ಮಾಹಿತಿ ಪಡೆಯಲಾಗಿದೆ. ಮುಂದಿನ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net