

ಮೈಸೂರು: ಬಿಸಿಲಿನ ತೀವ್ರತೆ ಹೆಚ್ಚಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುವ ಜತೆಗೆ ಜನ-ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಶಾಸಕ ಜಿ.ಟಿ. ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಅಧಿಕಾರಿಗಳೊಂದಿಗೆ ಕ್ಷೇತ್ರದ ಪ್ರಗತಿ ಪರಿಶಿಲನಾ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಐದಾರು ತಿಂಗಳ ಕಾಲ ಕ್ಷೇತ್ರದ ಎಲ್ಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ತಾಕೀತು ಮಾಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಬೇಸಿಗೆ ಸಂದರ್ಭ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಈ ಹಿನ್ನೆಲೆ ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಯಾರಿ ತಾಯಾರಿ ಮಾಡಿಕೊಳ್ಳಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿಯುವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದುಕೊಂಡರು.