ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

15 HANUR 1
ಹನೂರು ತಾಲೂಕು ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಪಿಡಿಒಗಳ ಸಭೆ ಆಯೋಜಿಸಲಾಗಿತ್ತು. ತಹಸೀಲ್ದಾರ್ ವೈ.ಕೆ .ಗುರುಪ್ರಸಾದ್, ತಾಪಂ ಇಒ ಉಮೇಶ್ ಇತರರು ಇದ್ದರು.
Published on

ಹನೂರು: ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಪ್ರತಿಯೊಬ್ಬರೂ ಖುದ್ದು ಭೇಟಿ ನೀಡಿ, ಸಮಸ್ಯೆ ಬಗೆಹರಿಸಬೇಕು. ನಿರ್ಲಕ್ಷೃ ತೋರಿದ್ದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಇಒ ಉಮೇಶ್ ಎಚ್ಚರಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸಂಬಂಧ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಈ ಬಾರಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಸುಮಾರು 10 ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಇದರಿಂದ ಜನರು ನೀರಿಗಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಆದರೆ ಈ ಕಾರ್ಯದಲ್ಲಿ ಕೆಲವರು ನಿರ್ಲಕ್ಷ್ಯ ವಹಿಸಿರುವುದು ಕಂಡು ಬಂದಿದೆ. ಇದರಿಂದ ನೀರಿನ ಸಮಸ್ಯೆ ತೀವ್ರವಾಗಲು ಕಾರಣವಾಗಿದೆ. ಆದ್ದರಿಂದ ಕೂಡಲೇ ಎಚ್ಚೆತ್ತು ಸಮಸ್ಯೆಯನ್ನು ಬಗೆಹರಿಸುವುದರತ್ತ ಗಮನಹರಿಸಬೇಕು. ಆಯಾ ಗ್ರಾಪಂನ ಪಿಡಿಒಗಳು ಬೆಳಗಿನ ಸಮಯದಲ್ಲಿ ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ, ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಬೇಕು. ಈ ಬಗ್ಗೆ ಜಿಪಿಎಸ್ ಫೋಟೋದೊಂದಿಗೆ ವರದಿ ಸಲ್ಲಿಸಬೇಕು. ಒಂದು ವೇಳೆ ಸಮಸ್ಯೆಗಳಿದ್ದಲ್ಲಿ ನಮ್ಮ ಗಮನಕ್ಕೆ ತರಬೇಕು. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ನಿರ್ಲಕ್ಷ್ಯಕ್ಕೆ ಶಿಸ್ತು ಕ್ರಮ: ಈ ಹಿಂದಿನ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿರುವ ಗ್ರಾಪಂಗಳಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಹೆಚ್ಚುವರಿ ವಿದ್ಯುತ್ ಮೋಟಾರ್ ಹಾಗೂ ಸ್ಟಾರ್ಟರ್ ಇರಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಆದರೆ ಯಾರು ಸಹ ಪಾಲನೆ ಮಾಡಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಹೆಚ್ಚುವರಿ ವಿದ್ಯುತ್ ಮೋಟಾರ್, ಸ್ಟಾರ್ಟರ್ ಸಿದ್ಧವಿರಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಸಲ್ಲದು. ಇನ್ನು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಮ.ಬೆಟ್ಟದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನಿರ್ಲಕ್ಷೃ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಒಂದು ತಿಂಗಳ ಕಾಲ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎಂದು ಸೂಚಿಸಿದರು.

ಅಗತ್ಯ ಕ್ರಮವಹಿಸಿ:

ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಮಾತನಾಡಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಸಂಬಂಧ ಪ್ರತಿಯೊಬ್ಬರೂ ಅಗತ್ಯ ಕ್ರಮವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಹಾಗೆಯೇ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದರು.

ಇದೇ ವೇಳೆ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇರುವ ಹಾಗೂ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸುವ ಗ್ರಾಮಗಳ ಬಗ್ಗೆ ಪಿಡಿಒಗಳಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಯಿತು. ಜಲಜೀವನ ಮಿಷನ್ ಯೋಜನೆ ಅನುಷ್ಠಾನಗೊಂಡಿರುವ, ಪ್ರಗತಿಯಲ್ಲಿರುವ ಹಾಗೂ ಪಂಚಾಯಿತಿಗೆ ಹಸ್ತಾಂತರವಾಗಿರುವ ಗ್ರಾಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು.

ಪ್ರತಿಧ್ವನಿಸಿದ ವಿಜಯವಾಣಿ ವರದಿ:

ಸಭೆಯಲ್ಲಿ ಮಂಗಳವಾರದ ವಿಜಯವಾಣಿ ಸಂಚಿಕೆಯಲ್ಲಿ ಕುರಟ್ಟಿ ಹೊಸೂರು ಗ್ರಾಪಂ ವ್ಯಾಪ್ತಿಯ ಎಲ್‌ಪಿಎಸ್ ಕ್ಯಾಂಪ್‌ನ ಸಿ ವಿಲೇಜ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಸಂಬಂಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರ ಬಗ್ಗೆ ವರದಿ ಪ್ರಕಟಗೊಂಡಿತ್ತು. ಈ ಬಗ್ಗೆ ಸಭೆಯಲ್ಲಿ ಇಒ ಉಮೇಶ್ ಅವರು ಪ್ರಸ್ತಾಪಿಸಿದರು. ಗ್ರಾಮಕ್ಕೆ ಭೇಟಿ ನೀಡಿ ವಿಶೇಷ ಕಾಳಜಿ ವಹಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಪಿಡಿಒ ಬಾಲಗಂಗಾಧರ್ ಅವರಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್, ಎಇ ಪೂರ್ಣಿಮಾ, ತಾಪಂ ವ್ಯವಸ್ಥಾಪಕ ರಮೇಶ್ ಹಾಗೂ ಪಿಡಿಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net