ಪರಿಶಿಷ್ಟ ಜಾತಿಗಳ ಕುಟುಂಬ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಗಮನಹರಿಸಿ

samikshe sabhe
Published on

ಮಡಿಕೇರಿ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಕುರಿತು ಮೇ೫ ರಿಂದ ನಡೆಯುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ನಿರ್ದೇಶನ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-೨೦೨೫ ಸಂಬಂಧ ಮಾಸ್ಟರ್ ತರಬೇತಿದಾರರಿಗೆ ಸೋಮವಾರ ನಡೆದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು ನಡೆಸುತ್ತಿದ್ದು, ಈ ಸಂಬಂಧ ಮಾಸ್ಟರ್ ಟ್ರೈನರ್‌ಗಳು ಪರಿಶಿಷ್ಟ ಜಾತಿಯ ಕುಟುಂಬಗಳು ಹೇಳುವ ಮಾಹಿತಿ ಮೊಬೈಲ್ ಆಪ್ ಮೂಲಕ ಭರ್ತಿ ಮಾಡಬೇಕು. ಈ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಅತೀಮುಖ್ಯ ಕಾರ್ಯದಲ್ಲಿ ಒಂದಾಗಿದೆ. ಆ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯಲ್ಲಿನ ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಸಮೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿಗಳು ವೈಜ್ಞಾನಿಕ ಮತ್ತು ವಸ್ತುನಿಷ್ಠವಾಗಿ ಸಮೀಕ್ಷೆ ಮಾಡಬೇಕು. ಸಂಶಯಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಸಮೀಕ್ಷೆ ನಡೆಸಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಸಮೀಕ್ಷೆ ಕೈಗೊಳ್ಳಲಾಗಿದ್ದು, ಮೊಬೈಲ್ ಆ್ಯಪ್ ಆಧಾರ್‌ದಲ್ಲಿ ಮನೆ ಮನೆ ಸಮೀಕ್ಷೆ ಮಾಡಬೇಕಿದೆ. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯು ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು, ಯಾವುದೇ ರೀತಿಯ ಸಂಶಯ ಇಲ್ಲದಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕೈಗೊಳ್ಳುವಂತೆ ಸಲಹೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸಮಗ್ರ ಸಮೀಕ್ಷೆ ಕೈಗೊಂಡು ದತ್ತಾಂಶ ಸಂಗ್ರಹಿಸಬೇಕಿದೆ. ಮೇ೫ ರಿಂದ ೧೭ ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಹಾಗೆಯೇ ಮೇ೧೯ ರಿಂದ ೨೧ ರವರೆಗೆ ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರ ಕೈಗೊಂಡು ಮನೆ ಮನೆ ಭೇಟಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿಗಳ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.

ಪರಿಶಿಷ್ಟ ಜಾತಿ ಮುಖಂಡರ ಜೊತೆ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಏ.೨೯ ರಂದು ಸಭೆ ನಡೆಯಲಿದ್ದು, ಪರಿಶಿಷ್ಟ ಜಾತಿಗಳ ಸಮಾಜದವರು ಸ್ವಯಂ ಪ್ರೇರಣೆಯಿಂದ ಸಭೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದು ಕೋರಿದರು.

ಮಾಸ್ಟರ್ ತರಬೇತಿದಾರರಾದ ಪ್ರಶಾಂತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net