

ಮಡಿಕೇರಿ: ವಿಧಾನಸಭಾ ಚುನಾವಣೆ ಸಂದರ್ಭ ಅಂತರ ರಾಜ್ಯ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶರವರ ಅಧ್ಯಕ್ಷತೆಯಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯ ಗಡಿಭಾಗದ ಕಾಸರಗೋಡು, ಕಣ್ಣೂರು ಮತ್ತು ವಯನಾಡು ಜಿಲ್ಲಾ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಬೇಕಿದೆ. ಆ ನಿಟ್ಟಿನಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆಯ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು. ಜತೆಗೆ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕು ಎಂದರು.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಮಾಡದೆ ಸುಗಮ ಹಾಗೂ ಶಾಂತಿಯುತವಾಗಿ ವಿಧಾನಸಭೆ ಚುನಾವಣೆ ನಡೆಸಲು ಅಂತರ ರಾಜ್ಯ ಗಡಿ ಪ್ರದೇಶದಲ್ಲಿ ಹೆಚ್ಚಿನ ಕಣ್ಗಾವಲು ವಹಿಸಬೇಕಿದೆ. ಈಗಾಗಲೇ ಪೆರುಂಬಾಡಿಯಲ್ಲಿ ಅಬಕಾರಿ ಇಲಾಖೆಯ ಚೆಕ್‌ಪೋಸ್ಟ್ ಇದ್ದು, ಕುಟ್ಟ ಮತ್ತು ಮಾಕುಟ್ಟದಲ್ಲಿ ಕೋವಿಡ್ ಸಂದರ್ಭದಲ್ಲಿ ನಿರ್ಮಾಣವಾಗಿದ್ದ ಕಂಟೈನರ್ ಮಳಿಗೆಯನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಅಬಕಾರಿ ಇಲಾಖೆಯ ಮಂಗಳೂರು ವಿಭಾಗದ ಜಂಟಿ ಆಯುಕ್ತ ಟಿ.ನಾಗರಾಜಪ್ಪ ಮಾತನಾಡಿ, ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಅಂತರರಾಜ್ಯ ಗಡಿ ಹೊಂದಿಕೊಂಡಿರುವ ಕಾಸರಗೋಡು, ಕಣ್ಣೂರು, ವಯನಾಡು ಜಿಲ್ಲೆಗಳು ಬರಲಿದೆ. ಈ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಎರಡು ರಾಜ್ಯಗಳ ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಕೈಗೊಳ್ಳಬೇಕು. ಯಾವುದೇ ರೀತಿಯ ಮಾದಕ ವಸ್ತುಗಳು, ಅಬಕಾರಿ ವಸ್ತುಗಳ ಕಳ್ಳಸಾಗಾಣಿಕೆಗೆ ಅವಕಾಶ ಮಾಡಬಾರದು. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಹೆಚ್ಚಿನ ನಿಗಾವಹಿಸಬೇಕು ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಗಡಿ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲಾಗುವುದು. ಪೊಲೀಸ್ ಇಲಾಖೆಯೊಂದಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಕೈಜೋಡಿಸಿ, ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಹೇಳಿದರು.
ಅಬಕಾರಿ ಇಲಾಖೆಯ ಕೊಡಗು ಜಿಲ್ಲಾ ಉಪ ಆಯುಕ್ತ ಜಗದೀಶ್ ನಾಯಕ್ ಮಾಹಿತಿ ನೀಡಿ, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕುಟ್ಟ, ಮಾಕುಟ್ಟ, ಕರಿಕೆ ಭಾಗದ ಚೆಕ್‌ಪೋಸ್ಟ್‌ಗಳು ಅಂತರರಾಜ್ಯ ಗಡಿ ವ್ಯಾಪ್ತಿಗೆ ಬರಲಿದೆ. ಈ ಚೆಕ್‌ಪೋಸ್ಟ್‌ಗಳಲ್ಲಿ ಯಾವುದೇ ರೀತಿಯ ಅಬಕಾರಿ ಅಕ್ರಮಗಳ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರ ವಹಿಸಲಾಗುತ್ತದೆ. ಆ ನಿಟ್ಟಿನಲ್ಲಿ ನೆರೆ ರಾಜ್ಯದವರು ಸಹಕಾರ ನೀಡುವಂತಾಗಬೇಕು. ಚುನಾವಣಾ ಸಂದರ್ಭದಲ್ಲಿ ಅಬಕಾರಿ ಚೆಕ್ ಪೋಸ್ಟ್‌ನಲ್ಲಿ ಅಬಕಾರಿ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್, ಆರು ಮಂದಿ ಕಾನ್ಸ್‌ಟೇಬಲ್‌ಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಕೇರಳ ರಾಜ್ಯದ ಗಡಿ ಜಿಲ್ಲೆಯ ಉಪ ಅಬಕಾರಿ ಆಯುಕ್ತ ಕೆ.ಎಸ್.ಶಾಜಿ(ವಯನಾಡು), ಕೆ.ಪ್ರೇಮ ಕೃಷ್ಣ(ಕಣ್ಣೂರು), ಸಹಾಯಕ ಅಬಕಾರಿ ಆಯುಕ್ತ ಜಾಯ್ ಜೋಸೆಫ್(ಕಾಸರಗೋಡು), ಕೊಡಗು ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಲಕ್ಷ್ಮೀಶ, ಕೊಡಗು, ದಕ್ಷಿಣ ಕನ್ನಡ, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಅಬಕಾರಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.