ಉತ್ತರ ಕ್ಷೇತ್ರದಲ್ಲಿ ಬಿಜೆಪಿ ದಾಖಲೆ ಗೆಲುವು

IMG-20230418-WA0013.jpg
Published on



ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು, ಜನಪ್ರೀಯ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ. ಹಾಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ ಗೆಲುವಿಗೆ ನಾವೆಲ್ಲಾ ಸಂಕಲ್ಪ ಮಾಡೋಣ ಎಂದು ಬಿಜೆಪಿ ಮುಖಂಡ ಮುರೇಂದ್ರಗೌಡ ಪಾಟೀಲ ಹೇಳಿದರು.
ನಗರದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಸಮ್ಮುಖದಲ್ಲಿ ಮಂಗಳವಾರ ಜರುಗಿದ ಸಂಧಾನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಬೇಕಿದೆ. ಹಾಗಾಗಿ ಪಕ್ಷದ ಕಾರ್ಯಕರ್ತರು, ರವಿ ಪಾಟೀಲ ಅವರ ಅಭಿಮಾನಿಗಳು, ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಬೇಕು ಎಂದರು.
 ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿವೃದ್ಧಿ ಕೆಲಸಗಳ ಕುರಿತು ಜನರಿಗೆ ತಿಳಿಸಲಾಗುತ್ತಿದೆ. ಈಗಾಗಲೇ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹಕಾರ, ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ.  ಕಳೆದ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಶಾಸಕ ಅನಿಲ ಬೆನಕೆ ಅವರಿಗೆ  ಅವಕಾಶ ನೀಡಿದ್ದರಿಂದ ಅವರ ಪರವಾಗಿ ಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿ ಮತಯಾಚನೆ ಮಾಡಲಾಗಿದೆ. ಈ ಬಾರಿ ಪಕ್ಷದ ವರಿಷ್ಠರು ಟಿಕೆಟ್ ನನಗೆ ನೀಡಿರುವುದರಿಂದ  ಎಲ್ಲರು ನನ್ನೊಂದಿಗೆ ಕೈ ಜೋಡಿಸಿದ್ದಾರೆ. ಈ ಬಾರಿಗೆ ದಾಖಲೆಗಳ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net