ತುರ್ತುಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿ: ಅಧಿಕಾರಿಗಳಿಗೆ ಡಿಸಿ ಡಾ.ಬೊಮ್ಮನಹಳ್ಳಿ ಸೂಚನೆ

belagavi dc meeting
Published on

ಬೆಳಗಾವಿ: ಮಳೆಗಾಲ ಆರಂಭಗೊಳ್ಳಲಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ (ಮೇ 26) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳೆದ ಬಾರಿಯ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿರಿಸಿಕೊಂಡು ಜನರ ತುರ್ತು ರಕ್ಷಣೆಗೆ ಬೋಟ್ ಹಾಗೂ ಪುನರ್ವಸತಿಗೆ ಪರಿಹಾರ ಕೇಂದ್ರಗಳ ಸ್ಥಾಪನೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳು ಉಪ ವಿಭಾಗ ಮಟ್ಟದಲ್ಲೂ ಇದೇ ವಾರದಲ್ಲಿ ಪೊಲೀಸ್, ಅಗ್ನಿಶಾಮಕ ಸೇರಿ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ ಎಲ್ಲ ವಿಷಯಗಳ ಬಗ್ಗೆ ವಿಸ್ತ್ರೃತವಾಗಿ ಚರ್ಚೆ ನಡೆಸಬೇಕು ಎಂದು ಹೇಳಿದರು.

ಚರಂಡಿ, ನಾಲಾ ಸ್ವಚ್ಛಗೊಳಿಸಿ: ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಚರಂಡಿ ಮತ್ತು ನಾಲಾಗಳನ್ನು ಸ್ವಚ್ಛಗೊಳಿಸಬೇಕು; ಲೋಕೋಪಯೋಗಿ ಇಲಾಖೆಯು ರಸ್ತೆ, ಸಿ.ಡಿ ಹಾಗೂ ಸೇತುವೆಗಳ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು. ಮಳೆ ನೀರಿನಿಂದ ಸಿ‌.ಡಿ. ಮತ್ತು ಸಣ್ಣ ಸೇತುವೆಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯು ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಪಶು ಪಾಲನಾ ಇಲಾಖೆಯು ಅಗತ್ಯ ಮೇವು ಸಂಗ್ರಹ ಮತ್ತು ಲಸಿಕೆ ಬಗ್ಗೆ ಪೂರ್ವ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಎನ್.ಡಿ.ಆರ್.ಎಫ್ ತಂಡದಿಂದ ಪರಿಶೀಲನೆ: ಶೀಘ್ರದಲ್ಲೇ ಜಿಲ್ಲೆಗೆ ಎನ್.ಡಿ.ಆರ್.ಎಫ್. ತಂಡ ಕೂಡ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡಲಿದೆ. ಜಿಲ್ಲೆಗೆ ಅಗತ್ಯವಿರುವ ಬೋಟ್ ಗಳ ಬಗ್ಗೆ ಪ್ರಸ್ತಾವ ಸಿದ್ಧಪಡಿಸಬೇಕು. ಅದೇ ರೀತಿ ತಕ್ಷಣಕ್ಕೆ ಬೋಟ್ ಪಡೆಯಲು ಮುಂಚಿತವಾಗಿಯೇ ಎಲ್ಲ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಲ್ಲದೇ ಜಿಲ್ಲೆಯಾದ್ಯಂತ ಈಗಾಗಲೇ ಲಭ್ಯವಿರುವ ಬೋಟ್ ಗಳ ಮಾಹಿತಿಯನ್ನು ಪಡೆದುಕೊಂಡು ಬೋಟ್ ಗಳ ದುರಸ್ತಿ ಮಾಡಿಸಬೇಕು ಹಾಗೂ ಬೋಟ್ ಬಳಕೆಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡಬೇಕು. ನದಿ ದಂಡೆಯಲ್ಲಿ ಇರುವ ಗ್ರಾಮಗಳಲ್ಲಿ ಜನರ ತುರ್ತು ರಕ್ಷಣೆಗೆ ಅಗತ್ಯವಿರುವ ಬೋಟ್ ಮತ್ತು ಅವುಗಳ ಆಪರೇಟರ್ ಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಜಲಾಶಯದಿಂದ ನೀರು ಬಿಡುಗಡೆ; ಮಹಾರಾಷ್ಟ್ರದ ಜಲಾಶಯಗಳಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು. ಜಲಾಶಯಗಳಿಂದ ನೀರು ಬಿಡುವಾಗ ಜಿಲ್ಲಾಡಳಿತಕ್ಕೆ ಮುಂಚಿತವಾಗಿಯೇ ಅಗತ್ಯ ಮಾಹಿತಿಯನ್ನು ನೀಡಬೇಕು ಎಂದು ಮಹಾರಾಷ್ಟ್ರದ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಜಲಸಂಪನ್ಮೂಲ ಇಲಾಖೆಗೆ ತಕ್ಷಣವೇ ಪತ್ರವನ್ನು ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು.

ವಿದ್ಯುತ್ ಮೀಟರ್ ಸ್ಥಳಾಂತರಕ್ಕೆ ನೋಟಿಸ್: ನಗರ ಪ್ರದೇಶಗಳಲ್ಲಿ ಬಹುತೇಕ ಕಟ್ಟಡಗಳಲ್ಲಿ ತಳಮಹಡಿ ಹಾಗೂ ಸೆಲ್ಲರ್ ಭಾಗದಲ್ಲಿ ವಿದ್ಯುತ್ ಮೀಟರ್ ಗಳಿದ್ದು, ಕಟ್ಟಡ ಅಥವಾ ಬಡಾವಣೆ ಜಲಾವೃತಗೊಂಡಾಗ ಮೀಟರ್ ಗಳು ಮುಳುಗಡೆಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಎಲ್ಲ ಕಟ್ಟಡ ಮಾಲೀಕರು ವಿದ್ಯುತ್ ಮೀಟರ್ ಗಳನ್ನು ಮೇಲಿನ ಮಹಡಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಸೂಚನೆ ನೀಡಿದರು.

ಈ ರೀತಿಯಲ್ಲಿ ಕಟ್ಟಡದ ಸೆಲ್ಲರ್ ಭಾಗದಲ್ಲಿ ಮೀಟರ್ ಅಳವಡಿಸಿರುವವರಿಗೆ ತಕ್ಷಣವೇ ನೋಟಿಸ್ ನೀಡಬೇಕು. ಒಂದು ವೇಳೆ ಮೀಟರ್ ಸ್ಥಳಾಂತರಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ವಿದ್ಯುತ್ ಕಂಬಗಳ ನಿರ್ವಹಣೆ ಬಗ್ಗೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಸಾಮಗ್ರಿಗಳನ್ನು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು ಎಂದು ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ‌.ಎಚ್. ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಲಾನಿ ಮೊಖಾಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net