

ಬೆಳಗಾವಿ: ನಗರದ ಆರ್‌ಪಿಡಿ ವೃತ್ತದಲ್ಲಿ ದೇಶ ವಿರೋಧಿ ಹೇಳಿಕೆಯ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ವಿಶ್ವ ಹಿಂದು ಪರಿಷತ್, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತ ಎಣಿಕೆಯ ಸಂದರ್ಭದಲ್ಲಿ ಕೆಲವರು ದೇಶ ವಿರೋಧಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಇಂತಹ ದೇಶ ದ್ರೋಹಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ದೇಶ ವಿರೋಧಿಗಳನ್ನು ಬೆಳೆಯಲು ಅವಕಾಶ ನೀಡಬಾರದು. ಇಂತಹ ದೇಶ ದ್ರೋಹಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿರುವುದಕ್ಕೆ ಕೆಲ ಮುಸ್ಲಿಂ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಕರಾವಳಿ ಭಾಗದಲ್ಲಿ ಹಿಂದೂಳಗಳ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಇಂತಹ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ದೇಶದ್ರೋಹಿಗಳನ್ನು, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ರಕ್ಷಣೆ ಮಾಡುವ ಕೆಲಸವನ್ನು ಯಾರು ಮಾಡಬಾರದು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಶ್ರೀಕಾಂತ ಕದಂ, ಜಿಲ್ಲಾ ಕಾರ್ಯದರ್ಶಿ ಆನಂದ ಕರಿಲಿಂಗಣ್ಣವರ, ಮಾಜಿ ಶಾಸಕ ಅನಿಲ ಬೆನಕೆ, ಡಾ.ರವಿ ಪಾಟೀಲ, ಕೃಷ್ಣ ಭಟ್, ಸಂಜಯ ಪಾಟೀಲ, ಕಾರ್ಯಕರ್ತರು ಇದ್ದರು.