ಬೆಳಗಾವಿ: ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪರಿಹಾರ ವಿತರಣೆಗೆ ಶೀಘ್ರವೇ ಕ್ರಮಕೈಗೊಳ್ಳಬೇಕು ಎಂದು ಸಹಕಾರ ಇಲಾಖೆ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣವರ ಸೂಚಿಸಿದ್ದಾರೆ.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಹಾನಿಗೊಳಗಾದ ಕೃಷಿ ಪ್ರದೇಶದ ದಾಖಲೆ ತಂತ್ರಾಂಶದಲ್ಲಿ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಭಕ್ಕೆ ಆಸ್ಪದ ನೀಡದಂತೆ ನಿಗಾವಹಿಸಬೇಕು ಎಂದರು.
ರಸಗೊಬ್ಬರ ಪೂರೈಕೆಯಲ್ಲಿ ಯಾವುದೆ ತೊಂದರೆಗಳಾಗದಂತೆ, ಯೂರಿಯಾ, ಡಿಎಪಿ ಸೇರಿ ಅಗತ್ಯ ದಾಸ್ತಾನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡಬೇಕು. ರೈತರ ಸಮಸ್ಯೆಗಳಿಗೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬೀಜ ರಸಗೊಬ್ಬರ ಬೇಡಿಕೆಗೆ ಅನುಗುಣವಾಗಿ ಈಗಾಗಲೇ ವಿತರಣೆ ಮಾಡಲಾಗಿದೆ. ಹಿಂಗಾರು ಬೇಸಿಗೆ ಹಂಗಾಮಿಗೆ ಬಿತ್ತನೆ ಬೀಜಗಳ 329 ಸೊಸೈಟಿ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಜೋಳ, ಮೆಕ್ಕೆಜೋಳ, ಗೋಧಿ, ಕಡಲೆ, ನೆಲಗಡಲೆ ಹಾಗೂ ಸೂರ್ಯಕಾಂತಿ ಬೆಳೆಗಳಿಗೆ ಸಹಾಯಧನದಡಿ ಬೇಡಿಕೆಯಂತೆ ಬಿತ್ತನೆ ಬೀಜ ಪೂರೈಸಲಾಗಿದೆ ಎಂದು ತಿಳಿಸಿದರು.
ರಾಮದುರ್ಗ, ಯರಗಟ್ಟಿ ತಾಲೂಕಿನಲ್ಲಿ ಬೆಳೆ ಹಾನಿಗಳಿಗೆ ಪರಿಹಾರ ಈಗಾಗಲೇ ಬಿಡುಗಡೆ ಮಾಡಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಗೆ ಎಲ್ಲ ರೈತರಿಗೆ ಸೂಚನೆ ನೀಡಲಾಗಿದೆ. ಅದರಂತೆ ಬೆಳೆ ಹಾನಿಗೊಳಗಾದ ರೈತರಿಗೆ ವಿಮೆ ಕ್ಲೇಮ್ ಮಾಡಿ ಕೊಡುವ ಪ್ರಕ್ರಿಯೆ ನಡೆದಿದೆ.