ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ
Published on

ಬೆಳಗಾವಿ :

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗಬೇಕು.ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ನನ್ನ ಅಭಿಪ್ರಾಯ. ಹಾಗಂತ ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳನ್ನು, ಅವರ ನೋವು-ನಲಿವುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಮಹಿಳೆಯರಿಗೆ ನ್ಯಾಯ ಸಿಗಬೇಕು, ಅವರ ಧ್ವನಿ ಸರ್ಕಾರದಲ್ಲಿ ಇರಬೇಕು ಎಂದರು.
ಜಾರ್ಖಂಡ, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ ಸರ್ಕಾರಗಳಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಹಾಗಂತ ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ. ರಾಜಕಾರಣದಲ್ಲಿ ಇವೆಲ್ಲವೂ ಸಹಜ ಎಲ್ಲವೂ ಅನಿಶ್ಚಿತ.
ಹೈಕಮಾಂಡ್ ಸಾಕಷ್ಟು ಆಲೋಚನೆ ಮಾಡಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಅದರ ನಿರ್ಧಾರವನ್ನು ಪ್ರಶ್ನಿಸುವುದು ಸರಿಯಲ್ಲ . ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವಕಾಶ ಕೊಟ್ಟರೂ, ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ರಾಜ್ಯದಲ್ಲಿ ಏನೋ ಒಂದು ರೀತಿಯ ಲೆಕ್ಕಾಚಾರದಲ್ಲಿ ಈ ಬಾರಿ ಬದಲಾವಣೆ ಆಗಿರುವುದನ್ನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಈ ವಿಚಾರದಲ್ಲಿ ನಾನು ಯಾವುದೇ ರೀತಿಯ ತೀಕ್ಷ್ಣ ಹೇಳಿಕೆ ನೀಡಲು ಹೋಗುವುದಿಲ್ಲ. ಮುಖ್ಯಮಂತ್ರಿಗಳು ಕೂಡ ಆದಷ್ಟು ಶೀಘ್ರದಲ್ಲಿ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೇಳಿದ್ದಾರೆ.
ಸಾಮಾನ್ಯ ಕಾರ್ಯಕರ್ತೆಯಿಂದ ಆರಂಭಿಸಿ ಜಿಲ್ಲಾಧ್ಯಕ್ಷೆ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ, ಶಾಸಕಿಯಾಗಿ ಹಾಗೂ ಸಚಿವೆಯಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ.ಪಕ್ಷದಲ್ಲಿ ಜವಾಬ್ದಾರಿ ನೀಡುವಾಗ ಪ್ರಾದೇಶಿಕತೆ, ಸಾಮಾಜಿಕ ಸಮೀಕರಣ, ಅನುಭವ, ಪಕ್ಷಕ್ಕೆ ಸಲ್ಲಿಸಿದ ಸೇವೆ ಸೇರಿದಂತೆ ಹಲವು ಮಾನದಂಡಗಳನ್ನು ನೋಡಲಾಗುತ್ತದೆ. ಯಾವ ಮಾನದಂಡದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎನ್ನುವುದು ಪಕ್ಷದ ನಿರ್ಧಾರ. ನನಗೆ ಮೂರು ವರ್ಷಗಳ ಕಾಲ ಅವಕಾಶ ಸಿಕ್ಕಿದೆ. ಆ ಮೂರು ವರ್ಷಗಳಲ್ಲಿ ನನ್ನ ಇಲಾಖೆಯಲ್ಲಿ ಬಹಳ ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ತೃಪ್ತಿ ನನಗಿದೆ ಎಂದರು.
..................
ಕೋಟ್ಸ್
ರಾಜಕೀಯ ಚಟುವಟಿಕೆಗಳು ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗುವುದಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡುತ್ತೇನೆ. ರಾಜಕಾರಣದಲ್ಲಿ ನಾಯಕರಿಗೆ ಒಮ್ಮೊಮ್ಮೆ ಪರೀಕ್ಷೆಯ ಸಂದರ್ಭದಲ್ಲಿ ನಾವು ತಾಳ್ಮೆಯಿಂದ ಇರಬೇಕು.
-ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವೆ
........
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net