ಮಕ್ಕಳ ಶಿಕ್ಷಣದ ಮೊದಲ ಮೆಟ್ಟಿಲು ಅಂಗನವಾಡಿಯಾಗಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಗುಣಮಟ್ಟದ ಅಂಗನವಾಡಿ ಕಟ್ಟಡ ಅತ್ಯಗತ್ಯ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಶಿರಗುಪ್ಪಿ ಗ್ರಾಮದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣದ ಅಡಿಪಾಯ ಹಾಕುವ ಜತೆಗೆ ಪ್ರಕೃತಿ ಹಾಗೂ ಪರಿಸರದ ಪರಿಚಯ ಕಲ್ಪಿಸಲು ಸುಸಜ್ಜಿತ ಅಂಗನವಾಡಿ ಕೇಂದ್ರಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಸಾವಿತ್ರಿ ಜಡಗೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹಾಗೂ ಗಣ್ಯರು ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಸರಸ್ವತಿ ಪೂಜೆ ನೆರವೇರಿಸಿ ಮಕ್ಕಳಿಗೆ ಸಿಹಿ ವಿತರಿಸಲಾಯಿತು.