ಬೆಳಗಾವಿ: ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಬೇಕು ಎಂದು ಆಗ್ರಹಿಸಿ ನಗರ ಹೊರವಲಯದ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ರೈತ ವೃತ್ತದಲ್ಲಿ ಭಾನುವಾರ ಸಂಚಾರ ತಡೆದು ಪ್ರತಿಭಟಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.
ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಯುತ್ತಿರುವ ರೈತರ ಅಹೋರಾತ್ರಿ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮನವೊಲಿಕೆಗೆ ಹಿಂದೆ ಸರಿಯದ ರೈತರು, ಒಂದು ತಾಸಿಗೂ ಹೆಚ್ಚು ಹೊತ್ತು ರಸ್ತೆ ಸಂಚಾರ ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಿದರು.
ರೈತ ಮುಖಂಡ ಪ್ರಕಾಶ ನಾಯಕ ಮಾತನಾಡಿ, ನ್ಯಾಯಯುತ ದರ ಸಿಗದೆ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ. ಆದರೆ ಜಿಲ್ಲಾಡಳಿತ ಮತ್ತು ಸರ್ಕಾರ ಸ್ಪಂದಿಸುತ್ತಿಲ್ಲ. ಈ ಹೋರಾಟ ಬೆಂಬಲಿಸಿ ವಿವಿಧೆಡೆ ಪ್ರತಿಭಟನೆ ಆರಂಭಗೊಂಡಿದ್ದು, ಆದಷ್ಟು ಬೇಗ ದರ ನಿಗದಿಪಡಿಸಿ, ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು ಎಂದು ಆಗ್ರಹಿಸಿದರು.