ಮಹಾ ನೀರು ಬಿಡುಗಡೆಗೆ ಯತ್ನ

ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ
Published on
ಬೆಳಗಾವಿ: ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಮಹಾನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಒಂದು ಟಿಎಂಸಿ ನೀರು ಬಿಟ್ಟರೆ ಅರ್ಧ ಸಮಸ್ಯೆ ಇತ್ಯರ್ಥವಾಗಲಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಿ ನೀರು ಬಿಡುಗಡೆ ಮಾಡಿಸಲಾಗುವುದು ಎಂದರು.
ಮಹಾನಗರ ಸೇರಿ ಜಿಲ್ಲಾದ್ಯಂತ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿಲ್ಲ. ಕೆಲವೆಡೆ ಬೇರೆ ಕಾರಣಗಳಿಂದ ನೀರು ಪೂರೈಕೆಯಲ್ಲಿ ಸಮಸ್ಯೆ ಆಗಿರುವ ಕುರಿತು ದೂರು ಬಂದಿವೆ. ಜಲಾಶಯದಲ್ಲಿ ನೀರಿದ್ದು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಕೊಳವೆ, ತೆರೆದಬಾವಿಗಳಲ್ಲಿನ ನೀರನ್ನು ಮಿತವಾಗಿ ಬಳಸಲು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ಕೊಳವೆ ಬಾವಿ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ದಿನದ 24 ಗಂಟೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಬೇಸಿಗೆಯಲ್ಲಿ ನೀರು ನಿಯಮಿತವಾಗಿ ಬಳಸುವ ಅಗತ್ಯವಿದೆ. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಮಹಾನಗರ ಪಾಲಿಕೆ ಸೇರಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು ಸರಿಯಾಗಿ ಪೂರೈಸಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ, ಎಸ್ಪಿ
ಕೆ.ರಾಮರಾಜನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net