ಬೆಳಗಾವಿ: ಸಂವಿಧಾನದ ಮೂಲ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ಭದ್ರತೆ ಪ್ರತಿಯೊಬ್ಬರಿಗೂ ಸಿಗುವಂತಾಗಬೇಕು. ಅವುಗಳನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಸಂವಿಧಾನ ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿದೆ. ಇದರಿಂದ ಪ್ರಜಾಪ್ರಭುತ್ವಕ್ಕೆ ಭದ್ರ ಅಡಿಪಾಯ ಒದಗಿದೆ ಎಂದರು.
ಜನರಿಂದ, ಜನರಿಗಾಗಿ, ಜನರಿಗೋಸ್ಕರವೇ ಇರುವ ಸರ್ಕಾರವನ್ನು ಪ್ರಜಾಪ್ರಭುತ್ವದ ಮೂಲಕ ಸಂವಿಧಾನ ನಮಗೆ ನೀಡಿದೆ. ನಮ್ಮ ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಿದೆ ಎಂದು ಹೇಳಿದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್ ಸೇರಿ ಕಾರ್ಯಾಲಯದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.