ಬೆಳಗಾವಿ : ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಮತ್ತು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಮಂಗಳವಾರ ಸಿಐಟಿಯು ಮತ್ತು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಚನ್ನಮ್ಮ ವೃತ್ತದಿಂದ ರ‌್ಯಾಲಿ ಮೂಲಕ ಜಿಲ್ಲಾ ಪಂಚಾಯಿತಿಗೆ ಆಗಮಿಸಿದ ನೌಕರರು, ಕೆಲಹೊತ್ತು ಧರಣಿ ಕುಳಿತು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಬಳಿಕ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.
ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್, ನೀರು ಸರಬರಾಜುದಾರರು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನವನ್ನು ಪರಿಗಣಿಸಿ ಇಂಕ್ರಿಮೆಂಟ್ ನೀಡಬೇಕು. ನಿವೃತ್ತಿ ಅಥವಾ ಮರಣ ಹೊಂದಿದರೆ ರೂ. 6 ಲಕ್ಷ ಇಡಗಂಟು ನೀಡಬೇಕು. ಠರಾವು ಮೂಲಕ ನೇಮಕಾತಿಯಾಗಿರುವ ಸಿಬ್ಬಂದಿಗೆ ಜಿಪಂ ಅನುಮೋದನೆ ಆಗದಿದ್ದರೂ ಇಡಗಂಟು ನೀಡಲು ಆದೇಶ ನೀಡಬೇಕು. ತರಬೇತಿ ಪಡೆದಿರುವ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು. ಒಡಂಬಡಿಕೆ ಪತ್ರ ಮತ್ತು ಪ್ರತಿವರ್ಷದ ನವೀಕರಣ ಪದ್ಧತಿ ರದ್ದುಪಡಿಸಬೇಕು. 15ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.
ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕು. 2017ರ ಒಳಗೆ ಇರುವ ಹೆಚ್ಚುವರಿ ಕರವಸೂಲಿಗಾರರಿಗೆ ಅನುಮೋದನೆ ನೀಡಬೇಕು. ರಾಜ್ಯದಲ್ಲಿ ಮೊದಲನೇ ಡೇಟಾ ಎಂಟ್ರಿ ಆಪರೇಟರ್‌ಗಳ ಹುದ್ದೆ ತೆರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ನೀಡಬೇಕು. ಖಾಲಿ ಹುದ್ದೆಗಳ ಭರ್ತಿ ಮಾಡಿಕೊಳ್ಳಬೇಕು. ಗ್ರೇಡ್-1 ಕಾರ್ಯದರ್ಶಿಗಳಿಂದ ಪಿ.ಡಿ.ಒ ಹುದ್ದೆಗೆ ರಾಜ್ಯಮಟ್ಟದಲ್ಲಿ ಕೊಡುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಜನಸಂಖ್ಯೆಗೆ ಆಧರಿಸಿ ಗ್ರಾಪಂಗಳನ್ನು ಮೇಲ್ದರ್ಜೆಗೆರಿಸಬೇಕು ಎಂಬುದು ಸೇರಿ ಒಟ್ಟು 13 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿಕೊಂಡರು.