ಅಥಣಿ: ಪ್ರತಿ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಅಪಘಾತದಲ್ಲಿ 800ಕ್ಕೂ ಅಧಿಕ ಜನರು ಮೃತಪಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ ಎಚ್ಚರಿಕೆ ನೀಡಿದರು.
ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಭಾನುವಾರ ಭೇಟಿ ನೀಡಿ, ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳ ಸ್ಥಿತಿಗತಿ ಪರಿಶೀಲಿಸಿದರು.
ಮದ್ಯ ಕುಡಿದು ವಾಹನ ಚಲಾಯಿಸಿ ಅಪಘಾತ ಮಾಡಿದಾಗ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು. ಕಾನೂನು ಎಲ್ಲರಿಗೂ ಒಂದೇ. ಯಾರೇ ದೂರು ನೀಡಿದರೂ
ಎ್ಐಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ಅತಿಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ. ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಡಿವೈಎಸ್ಪಿ ಪ್ರಶಾಂತ ಮುನ್ನೋಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್‌ಸೈ ಗಿರಿಮಲ್ಲಪ್ಪ ಉಪ್ಪಾರ, ವಿವಿಧ ಠಾಣೆಗಳ ಪಿಎಸ್‌ಐಗಳು ಮತ್ತಿತರ ಸಿಬ್ಬಂದಿ ಇದ್ದರು.