ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು.
ಹುಕ್ಕೇರಿ ತಾಲೂಕಿನ ಹರಗಾಪುರ ಹಾಗೂ ಪಾಶ್ಚಾಪುರ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಪರಿಶೀಲಿಸಿದ ಬಳಿಕ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಮಿತವಾಗಿ ಬಳಕೆ ಮಾಡಲು ಜನರಲ್ಲಿ ನಿರಂತರ ಜಾಗೃತಿ ಮೂಡಿಸಬೇಕು.
ಬೇಕಾಬಿಟ್ಟಿಯಾಗಿ ನೀರು ಬಳಸುವವರು, ನಲ್ಲಿ ನೀರು ಚರಂಡಿಗೆ ಬಿಡುವವರು, ವಾಹನ ಸ್ವಚ್ಛತೆಗೆ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಘಟಕಗಳು, ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು. ಕೊಳವೆ, ತೆರೆದ ಬಾವಿ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜನವಸತಿ ಪ್ರದೇಶಗಳಲ್ಲಿ ಬೇಡಿಕೆಗೆ ಅನುಗುಣವಾಗಿ ನದಿಗಳಿಂದ ನೀರು ಸರಬರಾಜು ಮಾಡಿ. ಈ ಕುರಿತು ಗ್ರಾಪಂ ಅಧಿಕಾರಿ, ಸಿಬ್ಬಂದಿ ಜನರಿಗೆ ತಿಳಿವಳಿಕೆ ನೀಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ತಾಪಂ ಇಒ ಟಿ.ಆರ್.ಮಲ್ಲಾಡದ, ತಹಸೀಲ್ದಾರ್ ಬಲರಾಮ ಕಟ್ಟಿಮನಿ, ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಮಠದ ಇತರರಿದ್ದರು.