ಗ್ಯಾರಂಟಿ ಯೋಜನೆ ನಡುವೆ ಉತ್ತರ ಕರ್ನಾಟಕ ನಿರ್ಲಕ್ಷೃ

ಬೆಳಗಾವಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಹಾಂತೇಶ ಕವಟಗಿಮಠ ಮಾತನಾಡಿದರು.ಸುಭಾಷ ಪಾಟೀಲ, ಎಂ.ಬಿ.ಝಿರಲಿ, ಗೀತಾ ಸುತಾರ, ಡಾ.ರವಿ ಪಾಟೀಲ ಇತರರಿದ್ದರು.
ಬೆಳಗಾವಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಹಾಂತೇಶ ಕವಟಗಿಮಠ ಮಾತನಾಡಿದರು.ಸುಭಾಷ ಪಾಟೀಲ, ಎಂ.ಬಿ.ಝಿರಲಿ, ಗೀತಾ ಸುತಾರ, ಡಾ.ರವಿ ಪಾಟೀಲ ಇತರರಿದ್ದರು.
Published on

ಬೆಳಗಾವಿ :

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದೆ. ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಟೀಕಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆಯಾಗುತ್ತಿಲ್ಲ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾರತಮ್ಯ ಮಾಡುವುದು ಸರಿಯಲ್ಲ. ಕೂಡಲೇ ಅಧಿವೇಶನದಲ್ಲಿ ಬೆಳಗಾವಿಗೆ ವಿಶೇಷ ಪ್ಯಾಕೇಜ ಘೋಷಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ವರ್ಷಗಳಿಂದ ಜಿಪಂ, ತಾಪಂ ಹಾಗೂ ಗ್ರಾಪಂಗಳಿಗೆ ಚುನಾವಣೆ ನಡೆಯದಿರುವುದರಿಂದ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ಬಳಕೆಯಾಗುತ್ತಿಲ್ಲ.ಇದರಿಂದ ಗ್ರಾಮೀಣಾಭಿವೃದ್ಧಿ ಕುಂಠಿತವಾಗಿದ್ದು, ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನ ಕೂಡ ಬಂದ್ ಆಗುತ್ತಿದೆ. ರಾಜ್ಯ ಸರ್ಕಾರದ ನಿರ್ಲಕ್ಷೃದಿಂದಾಗಿ ಅಭಿವೃದ್ಧಿ ಸ್ಥಗೀತಗೊಂಡಿದೆ.
ಈ ಹಿಂದೆ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸರ್ಕಾರದ ಅವಧಿಯಲ್ಲಿ 14 ನೀರಾವರಿ ಯೋಜನೆಗಳಿಗೆ ಕಾರ್ಯಾದೇಶ ನೀಡಲಾಗಿತ್ತು. ಈ ಯೋಜನೆಗಳಿಗಾಗಿ 5 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವು ಯೋಜನೆಗಳು ಕಾರ್ಯರೂಪಕ್ಕೆ ಬರಲಿಲ್ಲ. ಕೆರೆ ತುಂಬಿಸುವ ಹಾಗೂ ಏತ ನೀರಾವರಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡುತ್ತಿಲ್ಲ. ನೀರಾವರಿ ಯೋಜನೆಗಳಿಗೆ ಬಳಕೆಯಾದ ಅನುದಾನ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ವೆಚ್ಚ ಮಾಡಿರುವ ಅನುದಾನದ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ವಕ್ತಾರ ಎಂ.ಬಿ.ಝಿರಲೆ ಮಾತನಾಡಿ, ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣ ಸೇರಿದಂತೆ ಅಕ್ರಮ ಗಣಿಗಾರಿಕೆ, ವಂಚನೆ ಸೇರಿ ಬಿ.ನಾಗೇಂದ್ರ ವಿರುದ್ಧ 42 ಪ್ರಕರಣಗಳು ದಾಖಲಾಗಿವೆ . ತನಿಖೆ ಹಂತದಲ್ಲಿರುವ ವಾಲ್ಮೀಕಿ ನಿಗಮದ ಹಗರಣದ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು. ಇಲ್ಲವಾದರೆ ಸದನದ ಒಳಗೆ ಹಾಗೂ ಹೊರಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ, ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಆ.17ರಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಸಂಜಯ ಪಾಟೀಲ, ಡಾ. ರವಿ ಪಾಟೀಲ, ಸಚಿನ ಕಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net