ಬೆಳಗಾವಿ: ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗೋಕಾಕ ನಗರದಲ್ಲಿ ಗುರುವಾರ ಪ್ರತಿಭಟಿಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಗೋಕಾಕ ನಗರಕ್ಕೆ ಶಿಕ್ಷಣ ಕಲಿಯಲು ಸುತ್ತಲಿನ ಗ್ರಾಮಗಳಿಂದ ವಿದ್ಯಾರ್ಥಿನಿಯರು ಬರುತ್ತಾರೆ. ಆದರೆ, ಶಿಕ್ಷಣ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಕ್ರಮ ವಹಿಸಬೇಕು. ನಿರ್ಲಕ್ಷಿಸಿದರೆ ತೀವ್ರ ಹೋರಾಟ ಮಾಡಲಾಗುವುದು ಎಂದರು. ವಿಭಾಗ ಸಂಘಟನಾ ಕಾರ್ಯದರ್ಶಿ ಸಚಿನ ಹಿರೇಮಠ, ಬಾಲಾಜಿ ಜವಳಕರ, ಅಖಲಿ ಹುಲ್ಲೊಳ್ಳಿ, ಸೌರಭ ಮೂಲಿಮನಿ, ಪ್ರಜ್ವಲ ಇತರರಿದ್ದರು.
ಇಬ್ಬರು ಶಿಕ್ಷಕರ ಬಂಧನ
ಕೋಚಿಂಗ್ ಕೇಂದ್ರದಲ್ಲಿ ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕರಾದ ಗಿರೀಶ ಪಾಟೀಲ, ಸಿದ್ದಯ್ಯ ಪೂಜೇರನನ್ನು ಗೋಕಾಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡುತ್ತಿದ್ದ ಕೇಂದ್ರದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕೆಲ ಪಾಲಕರು ಬುಧವಾರ ಕೇಂದ್ರದ ಎದುರು ಪ್ರತಿಭಟನೆ ನಡೆಸಿದ್ದರು. ಬಳಿಕ ಸಂತ್ರಸ್ತೆಯರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.