ಬೆಳಗಾವಿ: ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ವ್ಯವಸ್ಥೆಯ ಅನುಷ್ಠಾನಕ್ಕೆ ಮತ್ತಷ್ಟು ವೇಗ ನೀಡಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಾಹುಲ್ ಶಿಂಧೆ ಅವರನ್ನು ಇ-ಸ್ವತ್ತು ಯೋಜನೆಯ ವಿಶೇಷ ಅಧಿಕಾರಿಯಾಗಿ ನೇಮಕ ಮಾಡಿದೆ.
ಗ್ರಾಮ ಪಂಚಾಯಿತಿಗಳ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವುದು, ತಾಂತ್ರಿಕ ಅಡಚಣೆಗಳನ್ನು ನಿವಾರಿಸುವುದು ಹಾಗೂ ಯೋಜನೆಯ ಅನುಷ್ಠಾನದಲ್ಲಿ ವಿವಿಧ ಹಂತದ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸುವ ಹೊಣೆಗಾರಿಕೆ ಇದೀಗ ರಾಹುಲ್ ಶಿಂಧೆ ಅವರ ಮೇಲಿದೆ.
ಡಿಜಿಟಲ್ ವ್ಯವಸ್ಥೆಗೆ ಮತ್ತಷ್ಟು ಬಲ
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿ ದಾಖಲೆಗಳು ಸೇರಿದಂತೆ ವಿವಿಧ ಮಾಹಿತಿಯನ್ನು ಇ-ಸ್ವತ್ತು ವ್ಯವಸ್ಥೆಯಡಿ ಡಿಜಿಟಲ್ ರೂಪದಲ್ಲಿ ನಿರ್ವಹಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿಶೇಷ ಅಧಿಕಾರಿಯ ನೇಮಕ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ, ಇ-ಸ್ವತ್ತು ತಾಂತ್ರಿಕ ಕೋಶ, ಪಿಎಂಯು (PMU) ಕೋಶ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಂಚಾಯತ್ ರಾಜ್ ಅಧಿಕಾರಿಗಳು ಹಾಗೂ ಸಂಬಂಧಿತ ಸಿಬ್ಬಂದಿಯೊಂದಿಗೆ ರಾಹುಲ್ ಶಿಂಧೆ ಸಮನ್ವಯ ಸಾಧಿಸಲಿದ್ದಾರೆ.
ತೆರಿಗೆ ಸಂಗ್ರಹಕ್ಕೂ ತಂತ್ರಜ್ಞಾನದ ಸ್ಪರ್ಶ
ಎಂ.ಟೆಕ್ ಪದವೀಧರರಾಗಿರುವ ರಾಹುಲ್ ಶಿಂಧೆ ಅವರು ಗ್ರಾಮ ಪಂಚಾಯಿತಿಗಳ ಆರ್ಥಿಕ ಸದೃಢತೆಗೆ ಒತ್ತು ನೀಡುವ ಜತೆಗೆ ತೆರಿಗೆ ಸಂಗ್ರಹ ಮತ್ತು ಆಸ್ತಿ ದಾಖಲೆಗಳ ನಿರ್ವಹಣೆಯಲ್ಲಿ ತಂತ್ರಜ್ಞಾನ ಬಳಕೆಗೆ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ.
ಹೊಸ ಸಾಫ್ಟ್‌ವೇರ್‌ಗಳ ಅಳವಡಿಕೆ ಹಾಗೂ ಡಿಜಿಟಲ್ ವ್ಯವಸ್ಥೆಗಳ ಮೂಲಕ ಪಂಚಾಯಿತಿಗಳ ಕಾರ್ಯನಿರ್ವಹಣೆಯನ್ನು ಪರಿಣಾಮಕಾರಿಗೊಳಿಸುವ ಪ್ರಯತ್ನಗಳು ನಡೆದಿರುವ ಹಿನ್ನೆಲೆಯಲ್ಲಿ, ಇ-ಸ್ವತ್ತು ಯೋಜನೆಯ ವಿಶೇಷ ಜವಾಬ್ದಾರಿಯೂ ಅವರಿಗೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
ಅಡೆತಡೆ ನಿವಾರಣೆಗೆ ವಿಶೇಷ ಹೊಣೆ
ಇ-ಸ್ವತ್ತು ಯೋಜನೆಯ ಕಾರ್ಯಪ್ರಗತಿಯನ್ನು ಪರಿಶೀಲಿಸುವುದು, ವಿವಿಧ ಹಂತಗಳಲ್ಲಿ ಎದುರಾಗುವ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವುದು, ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸುವುದು ಮತ್ತು ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಮಾರ್ಗದರ್ಶನ ನೀಡುವುದು ವಿಶೇಷ ಅಧಿಕಾರಿಯ ಪ್ರಮುಖ ಜವಾಬ್ದಾರಿಗಳಾಗಿವೆ.
ಈ ನೇಮಕದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇ-ಸ್ವತ್ತು ವ್ಯವಸ್ಥೆಯ ಅನುಷ್ಠಾನಕ್ಕೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಆಸ್ತಿ ದಾಖಲೆಗಳ ಡಿಜಿಟಲೀಕರಣದ ಮೂಲಕ ಪಾರದರ್ಶಕತೆ ಹೆಚ್ಚಿಸುವುದರ ಜತೆಗೆ, ಗ್ರಾಮೀಣ ಭಾಗದ ಜನರಿಗೆ ಡಿಜಿಟಲ್ ಸೇವೆಗಳು ಇನ್ನಷ್ಟು ಸುಲಭವಾಗಿ ದೊರೆಯುವಂತಾಗುವ ನಿರೀಕ್ಷೆಯೂ ಇದೆ.