

ಬೆಳಗಾವಿ:ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರನ್ನು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಬುಧವಾರ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆಗೆ 1,584 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಜಿಲ್ಲೆಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕಳೆದ ಮೂರು ವರ್ಷಗಳಿಂದ ಈ ವಿನೂತನ ಪರೀಕ್ಷೆ ಆಯೋಜಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಜಿಲ್ಲಾ ಹಂತದ ಪರೀಕ್ಷೆಯು ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ವಿಭಾಗಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಬೆಳಗಾವಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳಿಗೆ ನಗರದ ಸೇಂಟ್ ಕ್ಸೇವಿಯರ ಹಾಗೂ ಸೇಂಟ್ ಮೇರಿಸ್ ಶಾಲೆಗಳಲ್ಲಿ ಪರೀಕ್ಷೆ ನಡೆಸಲಾಯಿತು. 9ನೇ ತರಗತಿಯ 365 ಹಾಗೂ 10ನೇ ತರಗತಿಯ 374 ವಿದ್ಯಾರ್ಥಿಗಳು ಸೇರಿ ಒಟ್ಟು 739 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.ಚಿಕ್ಕೋಡಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳಿಗೆ ಚಿಕ್ಕೋಡಿಯ ಸಿ.ಎಸ್.ಎಸ್. ಪ್ರೌಢಶಾಲೆ ಹಾಗೂ ಆರ್.ಡಿ. ಪ್ರೌಢಶಾಲೆಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಇಲ್ಲಿ 9ನೇ ತರಗತಿಯ 421 ಹಾಗೂ 10ನೇ ತರಗತಿಯ 424 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.
ಎರಡೂ ಶೈಕ್ಷಣಿಕ ವಿಭಾಗಗಳಿಂದ 9ನೇ ತರಗತಿಯ 786 ಹಾಗೂ 10ನೇ ತರಗತಿಯ 798 ವಿದ್ಯಾರ್ಥಿಗಳು ಸೇರಿ ಒಟ್ಟು 1,584 ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಜಿಲ್ಲಾ ಹಂತದಲ್ಲಿ ಅತ್ಯುತ್ತಮ ಸಾಧನೆ ಮಾಡುವ 100 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಅಭಿನಂದಿಸಲು ಉದ್ದೇಶಿಸಲಾಗಿದೆ ಎಂದು ಜಿಪಂ ಅಧಿಕಾರಿಗಳು ತಿಳಿಸಿದ್ದಾರೆ.
.....................
ಬಾಕ್ಸ್
ಪರೀಕ್ಷಾ ಕೇಂದ್ರಕ್ಕೆ ಸಿಇಒ ಭೇಟಿ
ಪ್ರತಿಭಾನ್ವೇಷಣೆ ಪರೀಕ್ಷೆಯು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವುದರ ಜತೆಗೆ, ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.2024-25ನೇ ಸಾಲಿನಲ್ಲಿ ಆರಂಭಗೊಂಡ ಈ ಕಾರ್ಯಕ್ರಮವು ಹಂತ ಹಂತವಾಗಿ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ವ್ಯವಸ್ಥೆ ಹೊಂದಿದೆ.ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ವಿಭಾಗಗಳ ವ್ಯಾಪ್ತಿಯ ಒಟ್ಟು 15 ಶೈಕ್ಷಣಿಕ ವಲಯಗಳ ಸರ್ಕಾರಿ ಪ್ರೌಢಶಾಲೆ ಮತ್ತು ವಸತಿ ಶಾಲೆಗಳಲ್ಲಿ ಮೊದಲ ಹಂತದ ಪರೀಕ್ಷೆ ನಡೆಸಲಾಗುತ್ತದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದ್ದಾರೆ.
..................