

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಾಂಗ್ಲಾದೇಶ, ರೋಹಿಂಗ್ಯಾ ವಲಸಿಗರು ವಾಸಿಸಲು ಜಾಗ ಕಲ್ಪಿಸಿರುವ ಕುರಿತು ಶೀಘ್ರವೇ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು. ಈ ಪ್ರಕರಣ ಸಿಬಿಐ ತನಿಖೆಗೆ ಕೊಟ್ಟು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಾಕತ್ ಪ್ರದರ್ಶಿಸಲಿ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಮ್ಮಲ್ಲಿರುವ ಅಲ್ಪಸಂಖ್ಯಾತ ಮುಸ್ಲಿಂದವರಿಗೆ ಸೌಲಭ್ಯ ಕಲ್ಪಿಸುವ ಬದಲು ಬೇರೆ ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿರುವವರಿಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಎಷ್ಟು ಸರಿ? ಈ ಬಗ್ಗೆ ಎಲ್ಲ ದಾಖಲೆಗಳನ್ನು ಸಂಗ್ರಹಿಸಿಕೊಂಡಿದ್ದು ಬಿಡುಗಡೆ ಮಾಡುತ್ತೇವೆ ಎಂದರು.
ಮತದಾರರ ಪಟ್ಟಿಯಲ್ಲಿರುವ ನಕಲಿ ಹಾಗೂ ಅನಧಿಕೃತ ಮತದಾರರನ್ನು ಗುರುತಿಸಿ ಕೈಬಿಡುವ ಪ್ರಕ್ರಿಯೆಗೆ ರಾಜ್ಯ ಸರ್ಕಾರವೇ ಅಡ್ಡಿಪಡಿಸುತ್ತಿದೆ. ಒಂದು ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದರೂ ಮತದಾರರ ಪಟ್ಟಿಯಲ್ಲಿ ಅದೇ ಕುಟುಂಬದ ಹೆಸರಿನಲ್ಲಿ 10 ರಿಂದ 15 ಜನರಿದ್ದಾರೆ. ಅದನ್ನು ಪರಿಶೀಲನೆ ನಡೆಸುವಂತೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಕ್ಷಮಾಪಣೆ ಪತ್ರವನ್ನೂ ಸಲ್ಲಿಸಿಲ್ಲ . ಆದರೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮನವಿ ಪತ್ರ ಸರಿಯಾಗಿ ಓದದೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದುಕೊಂಡು ಕ್ಷಮೆಯಾಚನೆ ಕೇಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರವು ಅನಧಿಕೃತ ಮತದಾರರನ್ನು ರಕ್ಷಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಇದರಿಂದಾಗಿ ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿಲ್ಲ. ನಕಲಿ ಮತದಾರರನ್ನು ಪಟ್ಟಿಯಲ್ಲಿ ಉಳಿಸಲು ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸಚಿವರು, ಶಾಸಕರು ಸ್ಥಳೀಯ ಮಟ್ಟದ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪರ ಇರುವ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ ಎಂದು ದೂರಿದರು.
..............
ಕೊಟ್ಸ್
ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೂತಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರನ್ನು ಮುಸ್ಲಿಂ ಸಮುದಾಯದವರನ್ನು ನೇಮಕ ಮಾಡಿರುವ ಕುರಿತು ಆರಂಭದಲ್ಲಿಯೇ ಆಕ್ಷೇಪಣೆ ಸಲ್ಲಿಸಲಾಗಿದೆ. ಮತದಾರರ ಪಟ್ಟಿ ಪರಿಶೀಲನೆ ನಡೆಸದೆ ಬಿಜೆಪಿ ಮುಖಂಡರ ಮೇಲೆ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.
- ಅನಿಲ ಬೆನಕೆ, ಬಿಜೆಪಿ ರಾಜ್ಯದ ಉಪಾಧ್ಯಕ್ಷ
............