

ಬೆಳಗಾವಿ: ದೆಹಲಿಯಲ್ಲಿ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಪ್ರಕರಣ ಖಂಡಿಸಿ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬುಧವಾರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಕಚೇರಿಯಿಂದ ಕಿತ್ತೂರು ಚನ್ನಮ್ಮ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಆರೋಪಗಳ ಕುರಿತು ಸಮಗ್ರ ಸ್ಪಷ್ಟನೆ ನೀಡಬೇಕು. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ರಾಜೀನಾಮೆ ನೀಡಬೇಕು. ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ಅತ್ಯಂತ ಮುಖ್ಯ. ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ. ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಜಿಲ್ಲಾ ಅಧ್ಯಕ್ಷ ಕಾರ್ತಿಕ ಪಾಟೀಲ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಶೇಗಾವಿ, ಮಲ್ಲೇಶ ಚೌಗಲಾ, ಯಲ್ಲಪ್ಪ ಶಿಗೆ, ಉದಯ ಗೌಡ, ಮಂಜುನಾಥ ಗಂಗನವರ, ಐಶ್ವರ್ಯ ಸಾದನ್ನವರ, ಶಿವಾ ಹಂಪನವರ, ಪ್ರವೀಣ ತುಕ್ಕಾನಟ್ಟಿ, ಪ್ರಕಾಶ ಪಾಟೀಲ, ಮಡಿವಾಳಪ್ಪ ಅಕ್ಕಿ ಸಾಗರ, ಶಿವು ಪಾಟೀಲ ಇತರರಿದ್ದರು.