ಬೆಳಗಾವಿ ಚಲೋ 19ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಗೊಟಗೋಡಿಯ ಜಾನಪದ ವಿಶ್ವ ವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಅಕ್ರಮ ನೇಮಕಾತಿ ವಿರೋಧಿಸಿ ಡಿ. 19ರಂದು ಜಾನಪದ ಸ್ನಾತಕೋತ್ತರ ಹಾಗೂ ಸಂಶೋಧಕರ ಒಕ್ಕೂಟದ ವತಿಯಿಂದ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಶಿವಸೋಮಣ್ಣ ನಿಟ್ಟೂರು ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾನಪದ ವಿಶ್ವ ವಿದ್ಯಾಲಯದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಅಕ್ರಮ ನೇಮಕಾತಿ ಕುರಿತು ಈ ಭಾಗದ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಉನ್ನತ ಶಿಕ್ಷಣ ಸಚಿವರು ಕಳೆದ ಬಾರಿ ಬೆಳಗಾವಿ ಅಧಿವೇಶನದಲ್ಲಿ ಅಕ್ರಮ ನೇಮಕಾತಿ ಕುರಿತು ಸಿಐಡಿ ತನಿಖೆ ನಡೆಸುವ ಭರವಸೆ ನೀಡಿದ್ದರು. ಈಗ ದಾಖಲೆಗಳು ಸರಿಯಾಗಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ. ಸರ್ಕಾರ ತನಿಖೆಗೆ ಅವಕಾಶ ನೀಡದಿದ್ದರೆ ಮುಂದಿನ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದರು.

ಒಕ್ಕೂಟದ ಉಪಾಧ್ಯಕ್ಷ ನಾಗರಾಜ್​ ಎಸ್​, ಬಸವರಾಜ ದುಗಾಣಿ, ಬಸವರಾಜ ಗೊಬ್ಬಿ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net