

ಬೆಳಗಾವಿ : ಭಾರತದ ಸಂವಿಧಾನ ಪ್ರಸ್ತಾವನೆ ಜೀವನದ ನೀತಿ ಪಾಠ, ಮೌಲ್ಯಗಳ ಎತ್ತಿ ಹಿಡಿದು ಕಾರ್ಯನಿರ್ವಹಿಸಲು ನೆರವಾಗುತ್ತದೆ. ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದಿಂದ, ತಾಲೂಕು, ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಚಿತ್ರಣ ಇಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಇಡೀ ವಿಶ್ವದ ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಸಂವಿಧಾನ ಇಲ್ಲ. ಈ ರೀತಿಯ ಸಂವಿಧಾನ ಗ್ರಂಥ ರಚಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ವಸತಿ ನಿಲಯಗಳಲ್ಲಿ ಸಹ ಸಂವಿಧಾನ ಪೀಠಿಕೆ ಇಡಲಾಗುವುದು.
ಪ್ರತಿ ಭಾರತೀಯನ ಗುರಿ ಸಾಧನೆಗೆ ಸಂವಿಧಾನ ಗ್ರಂಥ ಪೂರಕವಾಗಿದೆ. ಸಮಾನತೆ ತೋರಿಸಿಕೊಟ್ಟ ಸಂವಿಧಾನಕ್ಕೆ ಪ್ರತಿಯೊಬ್ಬರೂ ನಮಿಸಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಶುಭಂ ಶುಕ್ಲಾ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಪ್ರಿಯಾ ಕಡೇಚೂರು, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ರಾಯವ್ವಗೊಳ, ಸಮಾಜದ ಮುಖಂಡರಾದ ಮಲ್ಲೇಶ ಚೌಗಲಾ, ಮಲ್ಲೇಶ ಕುರಂಗಿ, ಯಲ್ಲಪ್ಪ ಹುದಲಿ ಉಪಸ್ಥಿತರಿದ್ದರು