ಬಳ್ಳಾರಿ ; ಶಿವಶರಣರ ಮಧ್ಯದಲ್ಲಿ ಪ್ರಜ್ವಲವಾಗಿ ಬೆಳಗಿದ ನಿಜಶರಣ ಅಂಬಿಗರ ಚೌಡಯ್ಯ ಅವರ ಮಾತು ಕಟುವಾದರೂ ನೇರನುಡಿ ಹೊಂದಿದವರು ಎಂದು ತಹಸೀಲ್ದಾರ ಗುರುರಾಜ್ ಹೇಳಿದರು.
ಇಲ್ಲಿನ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ನಿಜಶರಣ ಶ್ರೀಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಜ್ಞಾನದಿಂದ ಜ್ಞಾನದ ಕಡೆ, ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ನಿಜ ಶರಣನು ಅಂಬಿಗರ ಚೌಡಯ್ಯರು. ಸಮಾಜದ ಅನಾಚಾರ, ಅನೈತಿಕತೆಯನ್ನು ನಿರ್ಭಿತಿಯಿಂದ ಕಟುವಾಗಿ ಟೀಕಿಸಿದವರು. ತನ್ನ ವಚನಗಳನ್ನು ವೈಚಾರಿಕವಾಗಿ ನಿರೂಪಿಸಿ ಮಹಾ ಮಾನವತವಾದಿಯಾಗಿದ್ದರು ಎಂದು ತಿಳಿಸಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಮಾತನಾಡಿ, ವಚನಕಾರ ಅಂಬಿಗರ ಚೌಡಯ್ಯ ಎಂಬ ಅಂಕಿತನಾಮದೊಂದಿಗೆ ಸುಮಾರು 279 ವಚನಗಳನ್ನು ಬರೆದರು. ಅವರ ಪದ್ಯಗಳು ಅವರ ಆಳವಾದ ಅನುಭವಗಳು ಮತ್ತು ಸಾಮಾಜಿಕ ಪ್ರಜ್ಞೆಯ ಪ್ರತಿಬಿಂಬವಾಗಿದ್ದು, ಅವುಗಳನ್ನು ಕೇಳುವ ಎಲ್ಲರ ಮೇಲೆ ಶಾಶ್ವತವಾದ ಪ್ರಭಾವ ಬೀರಿದೆ ಎಂದು ಹೇಳಿದರು.
ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಗುರು ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರ ವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದವರು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ನಿಜಶರಣ ಶ್ರೀಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಅಂಗವಾಗಿ ಅದ್ದೂರಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಪೂರ್ಣ ಕುಂಭ ಹೊತ್ತ ಮಹಿಳೆಯರು ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು.