ಅಪಘಾತ ಪ್ರಕರಣಗಳು ತಡೆಗಟ್ಟಿ

Published on

ಬಳ್ಳಾರಿ : ಸಾರಿಗೆ, ಲೋಕೋಪಯೋಗಿ, ಗಣಿ ಮತ್ತು ಭೂ ಇಲಾಖೆಯ ಅಧಿಕಾರಿಗಳು ರಸ್ತೆ ಸುರಕ್ಷತೆ ಕಾಳಜಿ ವಹಿಸಬೇಕು. ಮುಂದಾಗುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಡಿಸಿ ಪ್ರಶಾಂತಕುಮಾರ ಮಿಶ್ರಾ ಸೂಚಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಅಧಿಕ ಅದಿರು ಲಾರಿಗಳು ಸಂಚರಿಸುವ ಸಂಡೂರು ಭಾಗದಲ್ಲಿ ಸಾಕಷ್ಟು ಅಪಘಾತ ಪ್ರಕರಣ ಸಂಭವಿಸುತ್ತಿವೆ. ಅಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಯಾವೊಬ್ಬ ಸಾರಿಗೆ ಅಧಿಕಾರಿಯನ್ನು ನಿಯೋಜಿಸಿಲ್ಲ ಏಕೆ? ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪ್ರಶ್ನಿಸಿದರು. ಈ ಭಾಗದಲ್ಲಿ ಹೆಚ್ಚು ಭಾರೀ ಗಾತ್ರದ ವಾಹನಗಳ ಸಂಚಾರವಿದ್ದು, ಸಿಬ್ಬಂದಿ ಕೊರತೆ ಬಗ್ಗೆ ಕೇಂದ್ರ ಕಚೇರಿಗೆ ಪತ್ರ ಬರೆಯಿರಿ. ಅಪಘಾತ ಪ್ರಕರಣ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ರಸ್ತೆಗಿಳಿದು ವಾಸ್ತವತೆ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ನಗರದಲ್ಲಿ ಅತಿಕ್ರಮಣ ಮಾಡಿರುವ ಫುಟ್‌ಪಾತ್‌ಗಳನ್ನು ತೆರವುಗೊಳಿಸಿ, ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಗರದಿಂದ ಹೊರ ಹೋಗುವ ಹಾಗೂ ಒಳ ಬರುವ ವಾಹನಗಳ ಮೇಲೆ ನಿಗಾವಹಿಸಬೇಕು. ನಗರದಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಅಂತಹ ವಾಹನಗಳು ಕಂಡುಬಂದಲ್ಲಿ ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಿಗೆ ತೆರಳಲು ಬಸ್ ಕೊರತೆಯಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ ಮತ್ತು ಜನಪ್ರತಿನಿಧಿಗಳೂ ಕೂಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಾವು-ನೋವು ಉಂಟಾದಲ್ಲಿ ಯಾರು ಜವಾಬ್ದಾರಿ? ವಿಭಾಗಕ್ಕೆ ಆದಾಯವೂ ಬರುತ್ತಿದೆ. ಕೂಡಲೇ ಹೊಸ ಬಸ್ ಖರೀದಿಗೆ ಪ್ರಕ್ರಿಯೆ ಆರಂಭಿಸಬೇಕು ಎಂದು ಕೆಕೆಆರ್‌ಟಿಸಿ ಜಿಲ್ಲಾ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net