ಸಹಕಾರ ಕ್ಷೇತ್ರಕ್ಕೆ ಆನಂದ ಸಿಂಗ್ ಪ್ರವೇಶ: ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

09022021 Bellary-Hosapete Minister Anand Singh BDCC Bank
Published on

ಬಳ್ಳಾರಿ: ವಿಜಯನಗರ ಜಿಲ್ಲೆ ಅನುಷ್ಠಾನಗೊಂಡ ಮರುದಿನವೇ ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ಸಹಕಾರ ಕ್ಷೇತ್ರದಲ್ಲೂ ವಿಜಯ ಪತಾಕೆ ಹಾರಿಸಿದ್ದಾರೆ.

ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಆನಂದ ಸಿಂಗ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಜ.2ರಂದು ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ.ಚಂದ್ರಶೇಖರಯ್ಯ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆಗೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ಹೊಸಪೇಟೆ ತಹಸೀಲ್ದಾರ್ ವಿಶ್ವನಾಥ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಚಿವ ಆನಂದ ಸಿಂಗ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಟಿ.ಎಂ.ಚಂದ್ರಶೇಖರಯ್ಯ, ಉಪಾಧ್ಯಕ್ಷ ಕೆ.ತಿಪ್ಪೇಸ್ವಾಮಿ ಹಾಗೂ ಇತರರು ಹಾಜರಿದ್ದರು.

ಹೊಸಪೇಟೆ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಅಧ್ಯಕ್ಷರಾಗುವ ಮೂಲಕ ಆನಂದ ಸಿಂಗ್ ಸಹಕಾರ ಕ್ಷೇತ್ರ ಪ್ರವೇಶಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೊದಲ ಅವಧಿಯಲ್ಲೇ ಅಧ್ಯಕ್ಷ ಸ್ಥಾನವೂ ಒಲಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net