ಚನ್ನಮ್ಮ ಮಹಿಳೆಯರಿಗೆ ಪ್ರೇರಣೆ

Published on

ಬಳ್ಳಾರಿ : ಜೀವನದಲ್ಲಿ ಹೋರಾಟ ಮತ್ತು ಭೌತಿಕವಾದ ಶಕ್ತಿ ಇರಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆ ಮತ್ತು ಆದರ್ಶ ವಿಚಾರಗಳನ್ನು ಪಾಲಿಸಿ ಮೌಲ್ಯಯುತ ಬದುಕನ್ನು ರೂಪಿಸಿಕೊಳ್ಳೋಣ ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.

ನಗರದ ಸಾಂಸ್ಕೃತಿಕ ಸಮುಚ್ಛಯ ಹೊಂಗಿರಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಸ್ವಾತಂತ್ರೃ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬ್ರಿಟಿಷರ ವಿರುದ್ಧ ಹೋರಾಡಿದ್ದ ಕೆಚ್ಚೆದೆಯ ಸ್ವಾತಂತ್ರೃ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಅವರು ಅನೇಕ ವೀರ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದರು.

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಉಪಾಧ್ಯಕ್ಷ ಎಚ್.ಲಕ್ಷಣ ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆ ಎನಿಸಿಕೊಂಡಿದ್ದರು. ಸಮಾಜಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಲಾವತಿ ಬಿ.ಜಿ ಮಾತನಾಡಿ, ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚನ್ನಮ್ಮ ಅವರು ಕೇವಲ ತಮ್ಮ ಸಮುದಾಯಕ್ಕೆ ಸೀಮಿತವಾಗಿರದೇ, ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರೃ ಹೋರಾಟಗಾರ್ತಿಯಾಗಿದ್ದಾರೆ. ನಮ್ಮ ದೇಶದ ಸ್ವಾತಂತ್ರೃ ದಿನಾಚರಣೆಯಲ್ಲಿ ಪ್ರಸಿದ್ಧ ಕಪ್ಪ ಕಾಣಿಕೆಯ ಪ್ರಸಂಗ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರ ವೇಷ ಭೂಷಣ ಧರಿಸುವುದು ವಿಶೇಷವಾಗಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯು ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭಗೊಂಡು ಸಾಂಸ್ಕೃತಿಕ ಸಮುಚ್ಚಯ ಸಭಾಂಗಣ ಕಾರ್ಯಕ್ರಮದವರೆಗೆ ತಲುಪಿ ಸಂಪನ್ನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net