ಆಂತರಿಕ ದೂರು ಸಮಿತಿ ರಚಿಸಿ, ಅರಿವು ಮೂಡಿಸಿ

Published on

ಬಳ್ಳಾರಿ ; ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಿ, ಇದರ ಕುರಿತು ವಿವಿಧೆಡೆ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದರು.

ನಗರದ ನೂತನ ಡಿಸಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಖಾಸಗಿ, ಸರ್ಕಾರಿ, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿರುತ್ತದೆ. ಇದರಿಂದ ಮಹಿಳಾ ಅಧಿಕಾರಿ, ಸಿಬ್ಬಂದಿಗಳಿಗೆ ಹಲವಾರು ಸಂದರ್ಭದಲ್ಲಿ ವಿನಾಕಾರಣ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಅವರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳಿಗೆ ಸಂಬಂಧಪಟ್ಟ ದೂರುಗಳನ್ನು ಪರಿಣಾಮಕಾರಿ ಮತ್ತು ತ್ವರಿತವಾಗಿ ಪರಿಹರಿಸಲು ಆಂತರಿಕ ದೂರು ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸುತ್ತದೆ ಎಂದರು. ಪೊಲೀಸ್ ಠಾಣೆಗಳು ಮಹಿಳಾ ಸ್ನೇಹಿಯಾಗಿಯೂ ಕಾರ್ಯನಿರ್ವಹಿಸಬೇಕು. ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ಅತ್ಮವಿಶ್ವಾಸ ತುಂಬಬೇಕು. ಪೊಲೀಸ್ ಸೇರಿದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಐಸಿಸಿ ಇರಬೇಕು. ಹೆಣ್ಣುಮಕ್ಕಳು ದೌರ್ಜನ್ಯ, ಹಿಂಸೆಗೊಳಗಾದಾಗ ಐಸಿಸಿ ಸಮಿತಿಯಲ್ಲಿ ದೂರು ದಾಖಲಿಸಬೇಕು. ಜಿಲ್ಲೆಯ ಎಲ್ಲ ಬಾಲಕಿಯರ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಸ್ನಾನಕ್ಕೆ ಬಿಸಿನೀರಿನ ವ್ಯವಸ್ಥೆ, ಆರೋಗ್ಯದ ಕಾಳಜಿ, ವಸತಿ ನಿಲಯಗಳ ಶುಚಿತ್ವ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಎಸ್ಪಿ ಡಾ.ವಿ.ಜೆ. ಶೋಭಾರಾಣಿ ಮಾತನಾಡಿ, ಮಹಿಳೆಯರ ಸುರಕ್ಷತೆಗಾಗಿ ನವದುರ್ಗಿ ಟೀಮ್ ಆರಂಭಿಸಲಾಗಿದೆ. ಈ ತಂಡವು ಸಂಜೆ ವೇಳೆ ಶಾಲಾ-ಕಾಲೇಜು ಆವರಣ, ಉದ್ಯಾನವನ ಮತ್ತು ಬಸ್ ನಿಲ್ದಾಣಗಳಲ್ಲಿ ಗಸ್ತು ನಡೆಸುವರು ಎಂದು ಸಭೆಗೆ ತಿಳಿಸಿದರು.

ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮಾತನಾಡಿ, ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಶಸ್ತ್ರಚಿಕಿತ್ಸಾ ಕೊಠಡಿ, ಲ್ಯಾಬ್‌ಗಳು, ಕುಡಿಯುವ ನೀರು ಟ್ಯಾಂಕರ್‌ಗಳನ್ನು ಪ್ರತಿ ತಿಂಗಳಿಗೊಮ್ಮೆ ಸ್ವಚ್ಛಗೊಳಿಸಿ, ಪರೀಕ್ಷಿಸಿದ ವರದಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಂತರಿಕ ದೂರು ನಿರ್ವಹಣಾ ಸಮಿತಿಗೆ ಯಾವ ದೂರು ಪ್ರಕರಣಗಳು ದಾಖಲಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ ಸಭೆಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net