ಬಳ್ಳಾರಿ : ಜಿಲ್ಲಾಡಳಿತದಿಂದ ನ.18 ರಂದು ಭಕ್ತ ಕನಕದಾಸ ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ರೀತಿಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಡಿಸಿ ಮಹಮ್ಮದ್ ಎನ್. ಝುಬೇರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಕನಕದಾಸ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಇಲ್ಲಿನ ಕುಮಾರಸ್ವಾಮಿ ದೇವಸ್ಥಾನ ಬಳಿಯ ದಾಸಶ್ರೇಷ್ಠ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಕನಕದಾಸರ ಭಾವಚಿತ್ರದೊಂದಿಗೆ ಎಸ್‌ಪಿ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ವೇದಿಕೆಯವರೆಗೆ ಮೆರವಣಿಗೆ ಜರುಗುತ್ತದೆ ಹಾಗೂ ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು ಮತ್ತು ಸಾರ್ವಜನಿಕರು ಸ್ವ-ಇಚ್ಛೆಯಿಂದ ಭಾಗವಹಿಸುವಂತೆ ಸೂಚಿಸಿದರು. ದಾಸ ಶ್ರೇಷ್ಠ ಕನಕದಾಸರು ಸಮಾಜದ ಒಳಿತಿಗಾಗಿ ಶ್ರಮಿಸಿದವರಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾತ್ಮರ ಆಚರಣೆಗೆ ಎಲ್ಲರ ಸಹಕಾರ ಅಗತ್ಯ ಎಂದರು.
ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಡಿ ಸಾಧನೆಗೈದ ಮಹನೀಯರ ಹೆಸರು ನೀಡಿದರೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಮುಖಂಡರ ಬಳಿ ಚರ್ಚಿಸಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳು, ಶಾಲಾ-ಕಾಲೇಜು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ನಿರ್ದೇಶಿಸಿದರು. ವೇದಿಕೆ ಅಲಂಕಾರ, ಸ್ವಚ್ಛತೆ, ಕುಡಿಯುವ ನೀರು, ಲಘು-ಉಪಹಾರ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.