ಸದಸ್ಯತ್ವ ರದ್ದುಗೊಳಿಸಲು ಆಗ್ರಹ

Published on

ಬಳ್ಳಾರಿ; ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸದಸ್ಯ ಎನ್.ರವಿಕುಮಾರ ಅವರ ಹೇಳಿಕೆ ಖಂಡಿಸಿ ಹಾಗೂ ವಿಧಾನ ಪರಿಷತ್‌ನ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿ, ಸಂವಿಧಾನ ಬದ್ಧವಾದ ಸೈದ್ಧಾಂತಿಕ ಪ್ರಶ್ನೆಗಳಿಗೆ ಉತ್ತರ ನೀಡುವ ನೈತಿಕ ಸಾರ್ಮಥ್ಯವಿಲ್ಲದ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಕೆ ಮಾಡಿ ನಿಂದಿಸಿರುತ್ತಾರೆ. ಸರ್ಕಾರ ಉನ್ನತ ಸ್ಥಾನದಲ್ಲಿರುವ ಸಚಿವರನ್ನು ಇಂತಹ ಹೇಳಿಕೆ ನೀಡಿರುವ ನಾರಾಯಣಸ್ವಾಮಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಬೇಕು. ಇತ್ತೀಚಿಗೆ ಕಲಬುರಗಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಸದಸ್ಯ ಎನ್.ರವಿಕುಮಾರ ಅವರು ಜಿಲ್ಲಾಧಿಕಾರಿ ವಿರುದ್ಧ ಇವರು ಪಾಕಿಸ್ತಾನದಿಂದ ಬಂದಂತೆ ಕಾಣುತ್ತದೆ ಎಂದು ಹೇಳಿಕೆ ನೀಡಿದ್ದನ್ನು ಕಾಂಗ್ರೆಸ್ ಪಕ್ಷ ಖಂಡಿಸಿದೆ. ಆದ್ದರಿಂದ, ಕೂಡಲೇ ಈ ಇಬ್ಬರನ್ನು ವಿಧಾನ ಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಎಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net