ರಸ್ತೆ ನಿಯಮಗಳನ್ನು ಎಲ್ಲರೂ ಪಾಲಿಸಿ

Published on

ಬಳ್ಳಾರಿ : ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ಅಯ್ಯನಗೌಡ ಪಾಟೀಲ್ ತಿಳಿಸಿದರು.

ಇಲ್ಲಿನ ಆರ್‌ಟಿಒ ಕಚೇರಿ ಆವರಣದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಮಂಗಳವಾರ ಹಮ್ಮಕೊಂಡಿದ್ದ ವಾಹನ ಬಳಕೆದಾರರು ಹಾಗೂ ರಸ್ತೆ ಬಳಕೆದಾರರಲ್ಲಿ ರಸ್ತೆ ಸುರಕ್ಷತೆ ಕುರಿತು ಎಲ್‌ಇಡಿ ವಾಹನಗಳ ಮೂಲಕ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರಸ್ತೆ ನಿಯಮ ಉಲ್ಲಂಘನೆಯಿಂದ ಪ್ರತಿವರ್ಷ ರಾಜ್ಯದಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಸಾವು ಪ್ರಕರಣಗಳು ವರದಿಯಾಗುತ್ತಿವೆ. ಇದರಲ್ಲಿ ಮನೆಗೆ ಆಧಾರಸ್ತಂಭವಾಗಿರುವ ಯುವಕರೇ ಆಗಿರುತ್ತಾರೆ. ಹೀಗಾಗಿ ಪ್ರತಿಯೊಬ್ಬರೂ ತಪ್ಪದೇ ರಸ್ತೆ ನಿಯಮಗಳನ್ನು ಪಾಲಿಸುವುದರೊಂದಿಗೆ ಸಂಭವಿಸುವ ಅನಾಹುತದಿಂದ ಪಾರಬೇಕು ಎಂದರು.

ಕಾರ್ಯಕ್ರಮ ವ್ಯವಸ್ಥಾಪಕಿ ರಮ್ಯಾ ರಂಗೋಲಿ ಮಾತನಾಡಿ, ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು 5 ಎಲ್ಇಡಿ ವಾಹನಗಳು ಜಿಲ್ಲೆಯಲ್ಲಿ 10 ದಿನಗಳ ಕಾಲ ಸಂಚರಿಸಲಿದ್ದು, ಸಾರ್ವಜನಿಕರು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು. ಬಳಿಕ ರಸ್ತೆ ಸುರಕ್ಷತೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ-ಬೆಲ್ಟ್ ಕಟ್ಟಿಕೊಳ್ಳಿ, ಹೆಲ್ಮೆಟ್ ಜೀವ ಉಳಿಸುತ್ತದೆ, ರಸ್ತೆ ಸುರಕ್ಷತೆ ನಮ್ಮ ಆದ್ಯತೆ, ಕಾರು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ, ರಸ್ತೆ ನಿಯಮಗಳನ್ನು ಪಾಲಿಸಿ ಅಮೂಲ್ಯ ಜೀವಗಳನ್ನು ಉಳಿಸಿ, ಕಾರು ಚಾಲನೆ ವೇಳೆ ಮೊಬೈಲ್ ಫೋನ್ ಬಳಸದಿರಿ, ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ರಸ್ತೆ ನಿಯಮಗಳ ಅರಿವು ನಿಮಗಿರಲಿ, ರಸ್ತೆ ಅಪಘಾತ ತಡೆಯಿರಿ ಎಂಬ ಘೋಷವಾಕ್ಯಗಳ ಜಾಗೃತಿ ಫಲಕಗಳು ಸಂದೇಶ ನೀಡಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net